ADVERTISEMENT

ಅತ್ಯಾಚಾರ, ಕೊಲೆ ಪ್ರಕರಣ: ಸೆ. 17ರೊಳಗೆ ವರದಿ ಸಲ್ಲಿಸಲು CBIಗೆ SC ನಿರ್ದೇಶನ

ಪಿಟಿಐ
Published 9 ಸೆಪ್ಟೆಂಬರ್ 2024, 13:31 IST
Last Updated 9 ಸೆಪ್ಟೆಂಬರ್ 2024, 13:31 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಕೊಲ್ಕತ್ತದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಕುರಿತು ಸೆ. 17ರೊಳಗೆ ಸದ್ಯದ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶಿಸಿದೆ.

ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಚ್ಚಿದ ಲಕೋಟೆಯಲ್ಲಿ ಸಿಬಿಐ ವರದಿಯನ್ನು ಪೀಠಕ್ಕೆ ಸಲ್ಲಿಸಿದರು. ವರದಿ ಓದಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ‘ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಸೆ. 17ರೊಳಗೆ ತಾಜಾ ಸ್ಥಿತಿ ವರದಿಯನ್ನು ಸಲ್ಲಿಸಬೇಕು’ ಎಂದು ತಿಳಿಸಿದರು.

ನ್ಯಾ. ಚಂದ್ರಚೂಡ್ ಅವರೊಂದಿಗೆ ನ್ಯಾ. ಜೆ.ಬಿ. ಪರ್ದಿವಾಲಾ, ನ್ಯಾ. ಮನೋಜ್ ಮಿಶ್ರಾ ಅವರು ಪೀಠದಲ್ಲಿದ್ದರು. 

ADVERTISEMENT

‘ಪ್ರಕರಣದಲ್ಲಿ ಲಭ್ಯವಾದ ಜೈವಿಕ ಸಾಕ್ಷ್ಯಗಳನ್ನು ಏಮ್ಸ್‌ನಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಸಿಬಿಐ ಉದ್ದೇಶಿಸಿದೆ’ ಎಂದು ತುಷಾರ್ ಮೆಹ್ತಾ ಅವರು ಪೀಠದ ಗಮನಕ್ಕೆ ತಂದರು.

ಪಶ್ಚಿಮ ಬಂಗಾಳದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ‘ವೈದ್ಯೆಯ ಹತ್ಯೆ ಖಂಡಿಸಿ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಈವರೆಗೂ 23 ಜನ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ’ ಎಂದು ವರದಿ ಸಲ್ಲಿಸಿದರು.

ಈ ಪ್ರಕರಣದಲ್ಲಿ ಈವರೆಗೂ ಸಂಜಯ್ ರಾಜ್ ಎಂಬಾತನನ್ನು ಬಂಧಿಸಲಾಗಿದೆ. ಆರ್.ಜಿ. ಕರ್ ಕಾಲೇಜಿನಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಾಚಾರ್ಯ ಸಂದೀಪ್ ಘೋಷ್ ಅವರನ್ನು ಸಿಬಿಐ ಬಂಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.