ನವದೆಹಲಿ: ಭೀಮಾ–ಕೋರೆಗಾಂವ್ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲು ಪೊಲೀಸರಿಗೆ ಕಾಲಾವಕಾಶ ನೀಡಲು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆ ನೀಡಿದೆ.
ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರಿಗೆ ಕಾಲಾವಕಾಶ ನೀಡಿದ್ದ ಸ್ಥಳೀಯ ಕೋರ್ಟ್ ಆದೇಶವನ್ನು ಬಾಂಬೆ ಹೈಕೋರ್ಟ್ ಇತ್ತೀಚೆಗೆ ತಳ್ಳಿಹಾಕಿತ್ತು.
ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ನೇತೃತ್ವದ ಪೀಠ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಕಾರ್ಯಕರ್ತರಿಗೆ ನೋಟಿಸ್ ಜಾರಿಗೊಳಿಸಿತು.
ಕಾರ್ಯಕರ್ತರ ಬಂಧಿಸಿದ ಮಹಾರಾಷ್ಟ್ರ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಈ ಮೊದಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು. ಅಲ್ಲದೇ ತನಿಖೆಗೆ ಎಸ್‌ಐಟಿ ರಚಿಸಲೂ ನಿರಾಕರಿಸಿತ್ತು.
ವಕೀಲ ಸುರೇಂದ್ರ ಗಾಡ್ಲಿಂಗ್, ನಾಗಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಶೋಮಾ ಸೇನ್, ದಲಿತ ಕಾರ್ಯಕರ್ತ ಸುಧೀರ್ ಧಾವಲೆ,ಸಾಮಾಜಿಕ ಕಾರ್ಯಕರ್ತ ಮಹೇಶ್ ರಾವುತ್ ಮತ್ತು ಕೇರಳದ ರೋನಾ ವಿಲ್ಸನ್ ಅವರನ್ನು ಜೂನ್‌ನಲ್ಲಿ ಬಂಧಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.