ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ಗಿರೀಶ್‌ಚಂದ್ರ ಮುರ್ಮು ಅವರನ್ನು ಜಮ್ಮು–ಕಾಶ್ಮೀರದ ಹಾಗೂ ಮತ್ತೊಬ್ಬ ಐಎಎಸ್ ಅಧಿಕಾರಿ ಆರ್.ಕೆ.ಮಾಥೂರ್ ಅವರನ್ನು ಲಡಾಖ್‌ನ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಶುಕ್ರವಾರ ನೇಮಿಸಲಾಗಿದೆ.
ಸದ್ಯದ ಗವರ್ನರ್ ಸತ್ಯಪಾಲ್ ಮಲಿಕ್ ಅವರನ್ನು ಗೋವಾ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ಈ ಎರಡು ಕೇಂದ್ರಾಡಳಿತ ಪ್ರದೇಶಗಳು ಅ. 31ರಿಂದ ಅಸ್ತಿತ್ವಕ್ಕೆ ಬರಲಿವೆ. ಜಮ್ಮು–ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಆಗಸ್ಟ್ 5ರಂದು ರದ್ದು ಮಾಡಿದ್ದ ಕೇಂದ್ರ ಸರ್ಕಾರ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿತ್ತು.
1985ರ ಬ್ಯಾಚ್‌ನ, ಗುಜರಾತ್ ಕೇಡರ್‌ನ ಅಧಿಕಾರಿಯಾಗಿರುವ ಮುರ್ಮು ಪ್ರಸ್ತುತ ಹಣಕಾಸು ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ (ವೆಚ್ಚ) ಸೇವೆ ಸಲ್ಲಿಸುತ್ತಿದ್ದಾರೆ. ರಕ್ಷಣಾ ಕಾರ್ಯದರ್ಶಿಯಾಗಿ ಹಾಗೂ ಮುಖ್ಯ ಮಾಹಿತಿ ಆಯುಕ್ತರಾಗಿಯೂ ಸೇವೆ ಸಲ್ಲಿಸಿರುವ ಮಾಥೂರ್ 1977ರ ಬ್ಯಾಚ್‌ನ ಅಧಿಕಾರಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.