ADVERTISEMENT

ಸಂಸತ್ತಿನಲ್ಲಿ ಭದ್ರತಾ ವೈಫಲ್ಯ: ಉಭಯ ಸದನಗಳಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಡಿಸೆಂಬರ್ 2023, 5:46 IST
Last Updated 14 ಡಿಸೆಂಬರ್ 2023, 5:46 IST
<div class="paragraphs"><p>ಸಂಸತ್ತು</p></div>

ಸಂಸತ್ತು

   

ನವದೆಹಲಿ: ಸಂಸತ್ತಿನಲ್ಲಿ ಕಲಾಪ ನಡೆಯುತ್ತಿದ್ದಾಗಲೇ ಎದುರಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಚರ್ಚೆಯಾಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಈ ಸಂಬಂಧ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿರುವ ಕಾಂಗ್ರೆಸ್‌ ಸಂಸದ ಮಾಣಿಕ್‌ರಾಮ್‌ ಟಾಗೋರ್‌, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಬುಧವಾರ ಕಲಾಪ ನಡೆಯುತ್ತಿರುವಾಗಲೇ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗಿದ್ದರು. ಅಷ್ಟಲ್ಲದೆ, ‘ಸ್ಮೋಕ್‌ ಕ್ಯಾನ್‌’ (ಹಳದಿ ಬಣ್ಣದ ಹೊಗೆ ಉಗುಳುವ ಕ್ಯಾನ್‌) ಹಾರಿಸಿ ದಾಂದಲೆ ಎಬ್ಬಿಸಿದ್ದರು. ಇದರಿಂದಾಗಿ, ಸದನದಲ್ಲಿ ಆತಂಕ ಸೃಷ್ಟಿಯಾಗಿತ್ತು.

ಇದೇ ಸಮಯದಲ್ಲಿ ಸಂಸತ್‌ನ ಹೊರಗೂ ಇಬ್ಬರು ಪ್ರತಿಭಟನೆ ನಡೆಸಿದ್ದಾರೆ.

ಯುಎಪಿಎ ಅಡಿ ಪ್ರಕರಣ
ಈ ಕೃತ್ಯದಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಮೈಸೂರು ನಿವಾಸಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ಮೈಸೂರಿನ ವಿಜಯನಗರ ನಿವಾಸಿ ಮನೋರಂಜನ್‌ ಡಿ., ಉತ್ತರ ಪ್ರದೇಶದ ಸಾಗರ್‌ ಶರ್ಮಾ, ಹರಿಯಾಣದ ಹಿಸಾರ್‌ನ ನೀಲಂ, ಮಹಾರಾಷ್ಟ್ರದ ಲಾತೂರ್‌ನ ಅಮೋಲ್ ಶಿಂದೆ ಹಾಗೂ ವಿಶಾಲ್ ಬಂಧಿತರು. ಇನ್ನೊಬ್ಬನಿಗಾಗಿ ಶೋಧ ಮುಂದುವರಿದಿದೆ.

ಪ್ರಕರಣ ಸಂಬಂಧ ದೆಹಲಿ ಪೊಲೀಸರು, ಕಾನೂನುಬಾಹಿರ ಚಟುವಟಿಕೆಗಳ ‌ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತಾಪ ಸಿಂಹ ಉಚ್ಚಾಟನೆಗೆ ಆಗ್ರಹ
ಮೈಸೂರಿನ ಸಂಸದ ಪ್ರತಾಪ ಸಿಂಹ ಅವರ ಶಿಫಾರಸ್ಸಿನ ಮೂಲಕ ಪಾಸ್‌ ಪಡೆದ ಇಬ್ಬರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ, ಸಿಂಹ ಅವರನ್ನು ಲೋಕಸಭಾ ಸದಸ್ಯತ್ವದಿಂದ ಉಚ್ಚಾಟಿಸಬೇಕು ಎಂದು ವಿರೋಧ ಪಕ್ಷಗಳ ಸಂಸದರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.