ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಒ. ಪನ್ನೀರಸೆಲ್ವಂ ಅವರನ್ನು ಆರೋಪಮುಕ್ತಗೊಳಿಸಲು ಮದ್ರಾಸ್ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ಇದರಿಂದಾಗಿ ಪನ್ನೀರಸೆಲ್ವಂ ಅವರಿಗೆ ತೀವ್ರ ಹಿನ್ನಡೆಯಾಗಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.
ಪ್ರಕರಣ ಸಂಬಂಧ ಈ ವರ್ಷದ ಮಾರ್ಚ್‌ನಲ್ಲಿ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಪನ್ನೀರಸೆಲ್ವಂ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ನ್ಯಾಯಾಲಯವು ಪನ್ನೀರಸೆಲ್ವಂ ಅರ್ಜಿಯನ್ನು ವಜಾಗೊಳಿಸಿತ್ತು.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠವು ಪ್ರಕರಣದ ವಿಚಾರಣೆಯನ್ನು ಮುಂದುವರಿಯಲು ಹೈಕೋರ್ಟ್‌ಗೆ ಅವಕಾಶ ಮಾಡಿಕೊಟ್ಟಿತ್ತು. ಜತೆಗೆ, ಹೈಕೋರ್ಟ್ ತೀರ್ಪನ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.
ಪನ್ನೀರಸೆಲ್ವಂ ಅವರು ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಮದ್ರಾಸ್ ಹೈಕೋರ್ಟ್‌ನಿಂದ ಸ್ವಯಂ ಪ್ರೇರಿತ ಪರಿಷ್ಕೃತ ಆದೇಶವನ್ನು ಎದುರಿಸುತ್ತಿರುವ ತಮಿಳುನಾಡಿನ ನಾಲ್ಕನೇ ರಾಜಕೀಯ ನಾಯಕರಾಗಿದ್ದಾರೆ.
ಪನ್ನೀರಸೆಲ್ವಂ ಅವರು 2001ರಿಂದ 2006ರ ನಡುವೆ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಾಗಿದ್ದ ಸಂದರ್ಭದಲ್ಲಿ ₹1.7 ಕೋಟಿ ಮೌಲ್ಯದಲ್ಲಿ ಆಸ್ತಿಯನ್ನು ಕಬಳಿಸಿದ್ದಾರೆ ಎಂಬ ಆರೋಪ ಕುರಿತಾದ ಪ್ರಕರಣ ಇದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.