ಮುಂಬೈ: ಮಹಾರಾಷ್ಟ್ರದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಕುರಿತಾಗಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ‘ಮನೆಗೆ ಹೋಗಿ ಅಡುಗೆ ಮಾಡಿಕೊಂಡಿರಿ’ ಎಂಬ ವಿವಾದಾತ್ಮಕ ಹೇಳಿಕೆಯನ್ನು ಭಾನುವಾರ ಹಿಂಪಡೆದಿದ್ದಾರೆ.
ಈ ಹೇಳಿಕೆ ಸಂಬಂಧ ರಾಜ್ಯ ಮಹಿಳಾ ಆಯೋಗವು ಪಾಟೀಲ್ ಅವರಿಗೆ ನೋಟಿಸ್ ನೀಡಿತ್ತು. ಇದರ ಬೆನ್ನಲ್ಲೇ, ಪಾಟೀಲ್ ಅವರು ತಮ್ಮ ಹೇಳಿಕೆಗೆ ಕ್ಷಮೆ ಕೋರಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ತಿಳಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿದ ಸುಳೆ ಅವರು, 'ತಮ್ಮ ಹೇಳಿಕೆಗೆ ಕ್ಷಮೆ ಕೇಳುವ ಮೂಲಕ ಪಾಟೀಲ್ ಅವರು ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಅಲ್ಲದೆ, ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ' ಎಂದು ಕೋರಿದರು.
ಇತ್ತೀಚೆಗೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಕುರಿತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪಾಟೀಲ್ ಅವರು, ಸುಳೆ ಅವರನ್ನು ಉದ್ದೇಶಿಸಿ‘ದೆಹಲಿಗಾದರೂ ಹೋಗಿ ಅಥವಾ ಸ್ಮಶಾನಕ್ಕಾದರೂ ಹೋಗಿ,. ಆದರೆ, ಒಬಿಸಿಗಳಿಗೆ ಮೀಸಲಾತಿ ಕಲ್ಪಿಸಿ. ಸಂಸದೆಯಾಗಿದ್ದರೂ, ಮುಖ್ಯಮಂತ್ರಿ ಅವರ ಭೇಟಿಗೆ ಸಮಯಾವಕಾಶ ಕೋರಲು ಗೊತ್ತಿಲ್ಲ ಎಂದರೆ ಹೇಗೆ? ಮನೆಗೆ ಹೋಗಿ ಅಡುಗೆ ಮಾಡಿಕೊಂಡಿರಿ’ ಎಂದು ಹೇಳಿದ್ದರು. ಇದಕ್ಕೆ ಬಹುತೇಕ ಪಕ್ಷಗಳ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.