ಮುಂಬೈ: ‘ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯು ಮೂರನೇ ಎರಡರಷ್ಟು ಬಹುಮತ ಪಡೆಯಲಿದ್ದು, ಸರ್ಕಾರ ರಚಿಸಲಿದೆ. ಈ ಮೂಲಕ ಪಶ್ಚಿಮ ಭಾರತದಲ್ಲಿನ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರವನ್ನು ಕೆಳಗಿಳಿಸಲಾಗುತ್ತದೆ’ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.
‘ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದ ಜನರು ಬಿಜೆಪಿ ಮೈತ್ರಿಗೆ ಪಾಠ ಕಲಿಸಿದ್ದಾರೆ. ಅವರು ವಿಧಾನಸಭಾ ಚುನಾವಣೆಯಲ್ಲಿ ಎಂವಿಎ ಅನ್ನು ಬೆಂಬಲಿಸಲಿದ್ದಾರೆ. ನಾವು ಬಹುಮತ ಪಡೆದು ಸರ್ಕಾರ ರಚಿಸುತ್ತೇವೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಪಕ್ಷದ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ಹೇಳಿದರು.
‘ಮನಮೋಹನ್ ಸಿಂಗ್ ನೇತೃತ್ವದಲ್ಲಿದ್ದ ಯುಪಿಎ ಸರ್ಕಾರವು ರೈತರ ಸಾಲ ಮನ್ನಾ ಮಾಡಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ’ ಎಂದು ದೂರಿದರು.
ವಿದರ್ಭದ ಪ್ರವಾಸದಲ್ಲಿರುವ ಅವರು, ‘ಕೇಂದ್ರ ಸರ್ಕಾರ ಮಂಡಿಸಿರುವ ವಕ್ಫ್ (ತಿದ್ದುಪಡಿ) ಮಸೂದೆಯಿಂದ ಅಲ್ಪಸಂಖ್ಯಾತರಿಗೆ ಪ್ರಯೋಜನವಿಲ್ಲ. ಅದು ಅಲ್ಪಸಂಖ್ಯಾತರ ವಿರೋಧಿಯಾಗಿದ್ದು, ಮುಸ್ಲಿಂರನ್ನು ಗುರಿಯಾಗಿಸಲಾಗಿದೆ. ಈ ಮಸೂದೆಗೆ ವಿರೋಧ ಪಕ್ಷಗಳಿಂದ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ, ಸರ್ಕಾರ ಅದನ್ನು ಸಂಸತ್ತಿನ ಜಂಟಿ ಸಮಿತಿ (ಜೆಪಿಸಿ) ಪರಿಶೀಲನೆಗೆ ಕಳುಹಿಸಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.