ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಆರೋಗ್ಯ ಕೇಂದ್ರವೊಂದರಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್ ಲಸಿಕೆ ಬದಲು ರೇಬಿಸ್ ನಿರೋಧಕ ಚುಚ್ಚುಮದ್ದು ನೀಡಿದ ಪ್ರಕರಣದಕ್ಕೆ ಸಂಬಂಧಿಸಿದಂತೆ ವೈದ್ಯರು ಹಾಗೂ ದಾದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳೀಯ ನಿವಾಸಿ ರಾಜ್‌ಕುಮಾರ್ ಯಾದವ್ ಅವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಸೋಮವಾರ ಕಲ್ವಾ ಪ್ರದೇಶದ ಆರೋಗ್ಯ ಕೇಂದ್ರಕ್ಕೆ ತೆರಳಿದ್ದರು.
ಲಸಿಕೆ ಪಡೆಯಲು ಅವರು ಬೇರೆ ಸಾಲಿನಲ್ಲಿ ನಿಂತಿದ್ದರು. ಲಸಿಕೆ ಹಾಕಿದ ನಂತರ ಅವರಿಗೆ ರೇಬಿಸ್ ನಿರೋಧಕ ಚುಚ್ಚುಮದ್ದು ನೀಡಲಾಗಿದೆ ಎಂದು ತಿಳಿಸಲಾಯಿತು ಎಂದು ಠಾಣೆ ಮಹಾನಗರ ಪಾಲಿಕೆಯ (ಟಿಎಂಸಿ) ವಕ್ತಾರರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ವಿಷಯ ತಿಳಿದು ವ್ಯಕ್ತಿಯು ಗಾಬರಿಗೊಳಗಾದರು. ಆದರೆ, ಯಾವುದೇ ಗಂಭೀರ ಪರಿಣಾಮಗಳಾಗಿಲ್ಲ, ಅವರು ಆರೋಗ್ಯವಾಗಿದ್ದಾರೆ ಎಂದು ಅಧಿಕಾರಿ ಹೇಳಿದರು.
ಬಳಿಕ ಈ ಬಗ್ಗೆ ದೂರು ದಾಖಲಾಗಿದೆ. ಪ್ರಾಥಮಿಕ ತನಿಖೆ ಆಧರಿಸಿ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಆರೋಗ್ಯ ಕೇಂದ್ರದ ಉಸ್ತುವಾರಿ ವಹಿಸಿಕೊಂಡಿದ್ದ ಮಹಿಳಾ ವೈದ್ಯರು ಮತ್ತು ದಾದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.