ಠಾಣೆ: ಇದೇ 20ರಂದು ನಡೆಯಲಿರುವ ಮಹಾರಾಷ್ಟ್ರ ಚುನಾವಣೆಗೂ ಮುನ್ನ ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಥಾಣೆ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 105 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಮತ್ತು ಸೋಮವಾರದ ಮಧ್ಯರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಪೊಲೀಸರು ಹಲವು ಬಂದೂಕುಗಳು ಸೇರಿದಂತೆ 43 ಮಾರಕಾಸ್ತ್ರ ಮತ್ತು ₹5.07 ಲಕ್ಷ ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ ಎಂದು ಠಾಣೆ ಪೊಲೀಸ್ ವಕ್ತಾರರು ಹೇಳಿದ್ದಾರೆ.
ಶಸ್ತ್ರಾಸ್ತ್ರ ಕಾಯ್ದೆಯಡಿ 41 ಮಂದಿ, ಅಕ್ರಮ ಮಾದಕ ವಸ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ 15 ಜನರು ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದ 105 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದಲ್ಲದೆ, ಶೋಧ ಕಾರ್ಯಾಚರಣೆಯ ಭಾಗವಾಗಿ ನಗರದಾದ್ಯಂತ 74 ಹೋಟೆಲ್‌ಗಳು, 64 ಲಾಡ್ಜ್‌ಗಳು, 39 ಬಾರ್‌ಗಳು ಮತ್ತು 42 ಡಾನ್ಸ್ ಬಾರ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20ರಂದು ಮತದಾನ ನಡೆಯಲಿದೆ. 23ರಂದು ಫಲಿತಾಂಶ ಪ್ರಕಟವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.