ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು.
ಬೆಳಿಗ್ಗೆ ಮುಂಬೈನ ರಾಜಭವನಕ್ಕೆ ತೆರಳಿದ ಅವರು ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಈ ವೇಳೆ ಉಪ ಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಹಾಗೂ ದೇವೇಂದ್ರ ಫಡಣವೀಸ್ ಅವರು ಹಾಜರಿದ್ದರು.
ಶಿಂದೆ ಅವರ ರಾಜೀನಾಮೆ ಅಂಗೀಕಾರವಾಗಿದೆ ಎಂದು ರಾಜ್ಯಪಾಲರ ಕಚೇರಿ ತಿಳಿಸಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಜಯ ಗಳಿಸಿದೆ. 235 ಸ್ಥಾನಗಳನ್ನು ಗೆದ್ದುಕೊಂಡಿರುವ ಈ ಕೂಟದಿಂದ ಮುಂದಿನ ಮಹಾರಾಷ್ಟ್ರ ಸಿಂಎ ದೇವೇಂದ್ರ ಫಡಣವೀಸ್ ಎಂಬುದು ಈಗಾಗಲೇ ಮೈತ್ರಿಕೂಟದಲ್ಲಿ ನಿರ್ಧಾರವಾಗಿದೆ. ಅಧಿಕೃತ ಘೋಷಣೆಯೊಂದೇ ಭಾಕಿ.
ಈ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಕೇವಲ 49 ಸೀಟುಗಳನ್ನು ಗಳಿಸಿ ತೀವ್ರ ಮುಖಭಂಗ ಅನುಭವಿಸಿದೆ. ಅಷ್ಟೇ ಅಲ್ಲದೇ ಈಗ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವೇ ಇಲ್ಲದಂತಾಗಿದೆ.
ಬಿಜೆಪಿ 132, ಶಿವಸೇನಾ ಶಿಂದೆ ಬಣ 57, ಎನ್‌ಸಿಪಿ ಅಜಿತ್ ಪವಾರ್ ಬಣ 41 ಸ್ಥಾನಗಳನ್ನು ಗೆದ್ದಿವೆ.
ಏಕನಾಥ್ ಶಿಂದೆ ಹಾಗೂ ಅಜಿತ್ ಪವಾರ್ ಉಪ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.