ADVERTISEMENT

ಅನಿಲ್ ದೇಶಮುಖ್ ವಿರುದ್ಧ ಸಿಬಿಐ ತನಿಖೆ; ಆದೇಶ ಪ್ರಶ್ನಿಸಿ ಮಹಾ ಸರ್ಕಾರ ಸುಪ್ರೀಂಗೆ

ಪಿಟಿಐ
Published 6 ಏಪ್ರಿಲ್ 2021, 11:08 IST
Last Updated 6 ಏಪ್ರಿಲ್ 2021, 11:08 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ಮುಂಬೈ: ಎನ್‌ಸಿಪಿ ನಾಯಕ ಅನಿಲ್ ದೇಶಮುಖ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಸಿಬಿಐ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲಿದೆ ಎಂದು ರಾಜ್ಯ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಮಂಗಳವಾರ ಹೇಳಿದ್ದಾರೆ.

ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬಿರ್ ಸಿಂಗ್ ಅವರು ದೇಶಮುಖ್ ಮೇಲೆ ಹೊರಿಸಿರುವ ಆರೋಪಗಳ ಬಗ್ಗೆ 15 ದಿನಗಳ ಒಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಹೈಕೋರ್ಟ್, ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ದೇಶಮುಖ್ ಸೋಮವಾರ ಮಹಾರಾಷ್ಟ್ರದ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ನಂತರ, ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಪ್ರಮುಖ ಇಲಾಖೆಯ ಉಸ್ತುವಾರಿಯನ್ನು ಕ್ಯಾಬಿನೆಟ್ ಸಚಿವ ಮತ್ತು ಎನ್‌ಸಿಪಿ ನಾಯಕ ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ ಹಸ್ತಾಂತರಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಾಲ್ಸೆ ಪಾಟೀಲ್, ಈ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ರಾಜ್ಯ ಸರ್ಕಾರ ಎಲ್ಲ ನೆರವು ನೀಡಲಿದೆ. ಅಲ್ಲದೆ ಹೈಕೋರ್ಟ್‌ನ ಈ ಆದೇಶವನ್ನು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ಅವರು ಹೇಳಿದರು.

ಸಚಿವ ದೇಶಮುಖ್‌ ಅವರು ಮುಂಬೈನಲ್ಲಿರುವ ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಂದ ಪ್ರತಿ ತಿಂಗಳು ₹ 100 ಕೋಟಿ ಸಂಗ್ರಹಿಸುವಂತೆ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು ಎಂದು ಪರಮ್‌ ಬೀರ್‌ ಸಿಂಗ್‌ ಆರೋಪಿಸಿದ್ದರು. ಈ ಕುರಿತು ಮಾ. 25ರಂದು ನ್ಯಾಯಾಲಯಕ್ಕೆ ಕ್ರಿಮಿನಲ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.