ನವದೆಹಲಿ:ಮಹಾರಾಷ್ಟ್ರದಲ್ಲಿ ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಇನ್ನೇನು ರಚನೆಯಾಗಲಿದೆ ಎಂಬ ನಿರೀಕ್ಷೆ ಕಾರ್ಯಕರ್ತರಲ್ಲಿ ಗರಿಗೆದರಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ಮಹತ್ತರ ತಿರುವು ಪಡೆದುಕೊಂಡಿದೆ.
‘ಬಿಜೆಪಿ–ಶಿವಸೇನಾ ಚುನಾವಣೆಯಲ್ಲಿ ಜತೆಯಾಗಿ ಸ್ಪರ್ಧಿಸಿವೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)–ಕಾಂಗ್ರೆಸ್ ಜತೆಯಾಗಿ ಸ್ಪರ್ಧಿಸಿದ್ದೇವೆ. ಹೀಗಾಗಿ ಅವರ ದಾರಿ ಅವರು ನೋಡಿಕೊಳ್ಳಲಿ. ನಮ್ಮ ರಾಜಕೀಯ ನಾವು ಮಾಡುತ್ತೇವೆ’ ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಸೋಮವಾರ ಹೇಳಿದ್ದಾರೆ.ಸಂಸತ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. ಇದರಿಂದ, ಸರ್ಕಾರ ರಚನೆ ನಿಟ್ಟಿನಲ್ಲಿ ಶಿವಸೇನಾಗೆ ಭಾರಿ ಹಿನ್ನಡೆಯಾಗಿದೆ.
ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಮಾತುಕತೆ ನಡೆಸಲಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಲಿದ್ದೇನೆ ಎಂದೂ ಪವಾರ್ ತಿಳಿಸಿದ್ದಾರೆ.
ಮಹಾರಾಷ್ಟ್ರ ರಾಜಕೀಯಕ್ಕೆ ಸಂಬಂಧಿಸಿ ಮುಂದಿನ ನಡೆಗಳ ಬಗ್ಗೆ ಚರ್ಚಿಸಲು ಸೋನಿಯಾ–ಪವಾರ್ ಭೇಟಿ ನಿಗದಿಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅಧಿಕಾರ ಹಂಚಿಕೆ ವಿಚಾರದಲ್ಲಿ ಬಿಜೆಪಿ ಜತೆಗಿನ ಭಿನ್ನಾಭಿಪ್ರಾಯದಿಂದಾಗಿ ಶಿವಸೇನಾವು ಕಳೆದ ವಾರ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿತ್ತು. ಬಳಿಕ ಎನ್‌ಸಿಪಿ, ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚಿಸಲು ಮುಂದಾಗಿತ್ತು. ಸರ್ಕಾರ ರಚನೆಗೆ ಹಕ್ಕುಮಂಡಿಸಲು ಹೆಚ್ಚಿನ ಸಮಯಾವಕಾಶ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು. ಹೀಗಾಗಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದಿದೆ. ಆದರೂ ಸರ್ಕಾರ ರಚನೆ ಪ್ರಯತ್ನ ಕೈಬಿಡದ ಶಿವಸೇನಾವು ಎನ್‌ಸಿಪಿ ಮತ್ತು ಕಾಂಗ್ರೆಸ್ ಜತೆ ಹಲವು ಸುತ್ತಿನ ಮಾತುಕತೆ ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.