ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 5 ಅಭ್ಯರ್ಥಿಗಳ ಹೆಸರಿರುವ ನಾಲ್ಕನೇ ಪಟ್ಟಿಯನ್ನು ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಪಕ್ಷ ಬಿಡುಗಡೆ ಮಾಡಿದೆ.
ನವೆಂಬರ್ 20ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಸೋಮವಾರ ತಡರಾತ್ರಿ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಪಕ್ಷ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ್ದು, ನಾಮಪತ್ರ ಸಲ್ಲಿಕೆಗೆ ಇಂದು (ಮಂಗಳವಾರ) ಕೊನೆಯ ದಿನವಾಗಿದೆ.
ಮೊಹೋಲ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಮೇಶ್ ಕದಮ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ರಮೇಶ್ ಅವರು ಆ ಕ್ಷೇತ್ರದವರು ಅಲ್ಲ ಎಂಬ ಕಾರಣಕ್ಕೆ ವಿರೋಧ ವ್ಯಕ್ತವಾಗಿತ್ತು. ಇದೀಗ ರಮೇಶ್ ಬದಲಿಗೆ ರಾಜು ಖರೆ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದೆ.
ಮಾಧ ವಿಧಾನಸಭಾ ಕ್ಷೇತ್ರದಿಂದ ಅಭಿಜಿತ್ ಪಾಟೀಲ್ ಮತ್ತು ಪಂಢರಪುರ ಕ್ಷೇತ್ರದಿಂದ ಅನಿಲ್ ಸಾವಂತ್ ಅವರನ್ನು ಪಕ್ಷ ಕಣಕ್ಕಿಳಿಸಿದೆ.
ಮೋರ್ಶಿ ವಿಧಾನಸಭಾ ಕ್ಷೇತ್ರದಿಂದ ಗಿರೀಶ್ ಕರಾಳೆ ಹಾಗೂ ಮುಂಬೈನ ಮುಲುಂಡ್ ಕ್ಷೇತ್ರದಿಂದ ಸಂಗೀತಾ ವಾಜೆ ಸ್ಪರ್ಧಿಸಲಿದ್ದಾರೆ.
288 ಸದಸ್ಯ ಬಲದ 'ಮಹಾ' ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. 23ರಂದು ಫಲಿತಾಂಶ ಹೊರಬೀಳಲಿದೆ.
ಸದ್ಯ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ, ಬಿಜೆಪಿ ಹಾಗೂ ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವನ್ನು ಒಳಗೊಂಡ 'ಮಹಾಯುತಿ' ಸರ್ಕಾರ ಅಸ್ತಿತ್ವದಲ್ಲಿದೆ.
ಕಾಂಗ್ರೆಸ್ ಪಕ್ಷವು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ, ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಗಳನ್ನೊಳಗೊಂಡ 'ಮಹಾ ವಿಕಾಸ ಆಘಾಡಿ' (ಎಂವಿಎ) ಮೈತ್ರಿಕೂಟದಲ್ಲಿದೆ. ಕಾಂಗ್ರೆಸ್ 102, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ 85 ಹಾಗೂ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ 87 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಉಳಿದ ಸ್ಥಾನಗಳನ್ನು ಮೈತ್ರಿಯ ಭಾಗವಾಗಿರುವ ಇತರ ಪಕ್ಷಗಳಿಗೆ ಬಿಟ್ಟುಕೊಟ್ಟಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.