ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತೀಯ ಏಕತಾ ರ‍್ಯಾಲಿಗೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಭ ಕೋರಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳನ್ನು ಮರು ಸ್ಥಾಪಿಸುವ ದಿಸೆಯಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಲಿದೆ ಎಂದರು.
ಬಜೆಟ್ ಅಧಿವೇಶನದಲ್ಲಿ ರಫೇಲ್ ಪ್ರಸ್ತಾಪ: ‘ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ ರಫೇಲ್ ಒಪ್ಪಂದ ವಿವಾದ, ರೈತರ ಸಮಸ್ಯೆ, ನಿರುದ್ಯೋಗ, ಭ್ರಷ್ಟಾಚಾರ ಹಾಗೂ ಸಿಬಿಐ ಸೇರಿ ಮುಂತಾದ ತನಿಖಾ ಸಂಸ್ಥೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವುದನ್ನು ಕುರಿತು ನಮ್ಮ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಪ್ರಸ್ತಾಪ ಮಾಡಲಿದ್ದಾರೆ‘ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಪ್ರಜಾಪ್ರಭುತ್ವವನ್ನು ನಾಶಗೊಳಿಸುತ್ತಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ವಾಕ್ ಸ್ವಾತಂತ್ರ್ಯ ಮತ್ತು ಧರ್ಮ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯಲಿದೆ ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ (ಜೆಡಿಎಸ್) ಮೈತ್ರಿ ಸರ್ಕಾರ ಮುಂದುವರಿಯಲಿದೆ ಎಂದು ಖರ್ಗೆ ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.