ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳವು ಭಯೋತ್ಪಾದಕರ 'ಸುರಕ್ಷಿತ ಸ್ವರ್ಗ'ವಾಗಿದೆ ಎಂಬ ಬಿಜೆಪಿ ನಾಯಕರೊಬ್ಬರ ಆರೋಪಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ.
ಕೂಚ್ ಬೆಹಾರ್‌ನಲ್ಲಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ಆರೋಪಿಗಳು ಕರ್ನಾಟಕದವರು. ಇಲ್ಲಿಂದ ಬಂದವರಲ್ಲ. ಅವರು ಬಂಗಾಳದಲ್ಲಿ 2 ಗಂಟೆಗಳ ಕಾಲ ಅಡಗಿಕೊಂಡಿದ್ದರು. 2 ಗಂಟೆಗಳಲ್ಲಿ ನಮ್ಮ ಪೊಲೀಸರು ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬಿಜೆಪಿ ನಾಯಕ ಬಂಗಾಳ ಸುರಕ್ಷಿತವಲ್ಲ ಎಂದು ಹೇಳಿದ್ದಾರೆ. ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ದೆಹಲಿ ಸುರಕ್ಷಿತವಾಗಿದೆಯೇ?. ಅವರು ಏನು ಕೆಲಸ ಮಾಡಿದ್ದಾರೆಂದು ಅವರನ್ನು ಕೇಳಿ' ಎಂದು ವಾಗ್ದಾಳಿ ನಡೆಸಿದ್ದಾರೆ.
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಶಂಕಿತರಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಿಳಿಸಿದೆ.
ತೀರ್ಥಹಳ್ಳಿಯ ಮುಸಾವೀರ್, ಅಬ್ದುಲ್ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದರು. ಕರ್ನಾಟಕದಿಂದ ಪಶ್ಚಿಮ ಬಂಗಾಳಕ್ಕೆ ಹೋಗಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳ ಜಂಟಿ ಕಾರ್ಯಾಚರಣೆಯಲ್ಲಿ ಶಂಕಿತರನ್ನು ಬಂಧಿಸಿವೆ.
ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, 'ಇಂದು ಪಶ್ಚಿಮ ಬಂಗಾಳ ಭಯೋತ್ಪಾದಕರ 'ಸುರಕ್ಷಿತ ಸ್ವರ್ಗ' ಎಂದು ಆರೋಪಿಸಿದ್ದರು. ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದೆ. ದುರದೃಷ್ಟವಶಾತ್ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಭಯೋತ್ಪಾದಕರಿಗೆ ಪಶ್ವಿಮ ಬಂಗಾಳ ಸುರಕ್ಷಿತ ತಾಣವಾಗಿದೆ' ಎಂದು ಪೋಸ್ಟ್ ಮಾಡಿದ್ದರು.
ಅಮಿತ್ ಮಾಳವಿಯ ಟೀಕೆಗೆ ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆ ಸಹ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯ ಪೊಲೀಸರು ಸದಾ ಜಾಗರೂಕತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದೆ.
‘ಬಿಜೆಪಿಯ ಸುಳ್ಳನ್ನು ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆಯು ಬಹಿರಂಗಪಡಿಸುತ್ತದೆ. ವಾಸ್ತವ ಏನೆಂದರೆ; ಆರೋಪಿಗಳನ್ನು ಗುಪ್ತಚರ ದಳ ಮತ್ತು ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ ಪೂರ್ವ ಮೇದಿನಿಪುರದಲ್ಲಿ ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆಯ ಪಾತ್ರ ಏನೆಂದು ಎನ್‌ಎಐ ಹೇಳಿಕೆಯಲ್ಲಿ ದೃಢಪಡಿಸಿದೆ’ ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.