ಕೋಲ್ಕತ್ತ: ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ) ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಕೈವಾಡ ಇದೆ ಎಂಬುದಾಗಿ ಭಾವಿಸುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
ಬಿಜೆಪಿಯ ಕೆಲವು ನಾಯಕರು ತಮ್ಮ ಹಿತಾಸಕ್ತಿಗಾಗಿ ಕೇಂದ್ರ ಸಂಸ್ಥೆಗಳ ದುರುಪಯೋಗ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಕೇಂದ್ರದ ತನಿಖಾ ಸಂಸ್ಥೆಗಳ ದುರ್ಬಳಕೆ ವಿರುದ್ಧ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿಲುವಳಿ ಮಂಡನೆ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಅಜೆಂಡಾಗಳು ಮತ್ತು ಪಕ್ಷದ ಹಿತಾಸಕ್ತಿಗಳು ಮಿಶ್ರವಾಗದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಅವರನ್ನು ಮಮತಾ ಒತ್ತಾಯಿಸಿದರು.
ವಿಧಾನಸಭೆಯಲ್ಲಿ ನಿಲುವಳಿಗೆ ಅನುಮೋದನೆ ಪಡೆಯಲಾಗಿದೆ. ಬಿಜೆಪಿ ನಿಲುವಳಿಯನ್ನು ವಿರೋಧಿಸಿದೆ.
‘ಕೇಂದ್ರ ಸರ್ಕಾರ ಸರ್ವಾಧಿಕಾರದ ಮಾದರಿಯಲ್ಲಿ ವರ್ತಿಸುತ್ತಿದೆ. ಈ ನಿಲುವಳಿ ಯಾರೊಬ್ಬರ ವಿರುದ್ಧವೂ ಅಲ್ಲ. ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ವಿರುದ್ಧ ಮಾತ್ರ’ ಎಂದು ಮಮತಾ ಹೇಳಿದರು.
ಸಿಬಿಐ ಹಾಗೂ ಇ.ಡಿ ವಿರುದ್ಧದ ನಿಲುವಳಿ ವಿಧಾನಸಭೆಯ ನಿಯಮಗಳು ಮತ್ತು ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.