ಮುಂಬೈ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕೊಲೆ ಮಾಡಲು ಪಾತಕಿ ದಾವೂದ್ ಇಬ್ರಾಹಿಂನ ಸಹಚರರು ತನಗೆ ಗುತ್ತಿಗೆ ಕೊಟ್ಟಿದ್ದಾರೆ ಎಂದು ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಪೂರ್ವ ಮುಂಬೈನ ಸಿಯಾನ್ ನಿವಾಸಿಯಾಗಿರುವ 29 ವರ್ಷದ ಕಮ್ರಾನ್ ಅಮೀರ್ ಖಾನ್ ಎಂಬಾತ ಈ ಕರೆ ಮಾಡಿದ್ದು, ಬಳಿಕ ಅದು ಹುಸಿ ಕರೆ ಎಂದು ಗೊತ್ತಾಗಿದೆ.
‘ಆರೋಪಿಯು ಮಂಗಳವಾರ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ, ಜೆಜೆ ಸರ್ಕಾರಿ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕೊಲೆ ಮಾಡಲು ಪಾತಕಿ ದಾವೂದ್ ಇಬ್ರಾಹಿಂ ಸಹಚರರು ತನಗೆ ಗುತ್ತಿಗೆ ಕೊಟ್ಟಿದ್ದಾರೆ’ ಎಂದು ಹೇಳಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಜೆಜೆ ಆಸ್ಪತ್ರೆಯಲ್ಲಿ ಭಾರಿ ಪ್ರಮಾಣದಲ್ಲಿ ರೋಗಿಗಳು ಇದ್ದಿದ್ದರಿಂದ ತಪಾಸಣೆಗೆ ವೈದ್ಯರು ವಿಳಂಬ ಮಾಡುತ್ತಿದ್ದರು. ಹೀಗಾಗಿ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಈ ಹಿಂದೆ ಕೂಡ ಹುಸಿ ಬಾಂಬ್ ಕರೆ ಮಾಡಿ ಬಂಧನಕ್ಕೊಳಗಾಗಿದ್ದ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (ಸಿ) ಅಡಿ ದೂರು ದಾಖಲಿಸಿಕೊಳ್ಳಲಾಗಿದೆ.
ಯೋಗಿ ಆದಿತ್ಯನಾಥ್ ಅವರನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದಕ್ಕೆ ಈ ಹಿಂದೆ ಈತನನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.