ಚಂಡೀಗಢ: ಖನೌರಿ ಗಡಿಯಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಹಾಗೂ ಆತನ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಶುಕ್ರವಾರ ಘೋಷಿಸಿದ್ದಾರೆ.
ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖನೌರಿ ಗಡಿಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಮೃತಪಟ್ಟಿದ್ದರು. ಘಟನೆಯಲ್ಲಿ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪ್ರತಿಭಟನಾನಿರತ ರೈತರು ಬ್ಯಾರಿಕೇಡ್‌ಗಳತ್ತ ಮುನ್ನುಗ್ಗಲು ಯತ್ನಿಸಿದಾಗ ಘರ್ಷಣೆ ನಡೆದಿತ್ತು. ಅವರನ್ನು ಚದುರಿಸಲು ಹರಿಯಾಣ ಪೊಲೀಸರು ಮೂರು ಸುತ್ತು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದರು. ಇದಕ್ಕೆ ಅವರು ಡ್ರೋನ್ ಅನ್ನೂ ಬಳಸಿದರು.
‘ಖನೌರಿ ಗಡಿಯಲ್ಲಿ ನಡೆದ ರೈತ ಚಳವಳಿಯಲ್ಲಿ ಹುತಾತ್ಮರಾದ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ ₹1 ಕೋಟಿ ಆರ್ಥಿಕ ನೆರವು ಹಾಗೂ ಅವರ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು' ಎಂದು ಮಾನ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೃತ ರೈತ ಸಿಂಗ್ ಅವರ ಸಾವಿಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸುವುದರ ಜೊತೆಗೆ ಅವರ ಕುಟುಂಬಕ್ಕೆ ಆರ್ಥಿಕ ಪರಿಹಾರ ಮತ್ತು ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದರು.
‘ಯುವ ರೈತನ ಸಾವಿನಿಂದ ದುಃಖಿತನಾಗಿದ್ದೇನೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಬುಧವಾರ ಹೇಳಿದ್ದರು.
ಎಂಎಸ್‌ಪಿಯ ಕಾನೂನು ಖಾತ್ರಿ, ಕೃಷಿ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) 'ದೆಹಲಿ ಚಲೋ' ಮೆರವಣಿಗೆಯನ್ನು ನಡೆಸುತ್ತಿವೆ.
ಖನೌರಿಯಲ್ಲಿ ನಡೆದ ಘರ್ಷಣೆಯಲ್ಲಿ ಪ್ರತಿಭಟನಾನಿರತ ರೈತ ಮೃತಪಟ್ಟ ಹಿನ್ನೆಲೆಯಲ್ಲಿ ರೈತ ಮುಖಂಡರು ಬುಧವಾರದಿಂದ ಎರಡು ದಿನಗಳ ಕಾಲ 'ದೆಹಲಿ ಚಲೋ' ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದರು.
ಪ್ರತಿಭಟನೆಗೆ ಸಂಬಂಧಿಸಿ ಮುಂದಿನ ಕ್ರಮಗಳ ಕುರಿತು ಇಂದು(ಶುಕ್ರವಾರ) ಸಂಜೆ ನಿರ್ಧರಿಸಲಾಗುವುದು ಎಂದು ರೈತ ಮುಖಂಡ ಸರವಣ ಸಿಂಗ್ ಪಂಢೇರ್ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.