ಲಖನೌ: ನಗರದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡವನ್ನು ಉಗ್ರಾಣವಾಗಿ ಬಳಸಲಾಗುತ್ತಿತ್ತು. ಮೂರು ಅಂತಸ್ತಿನ ಕಟ್ಟಡದಲ್ಲಿ ಕೆಲವು ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದವು. ಸುಮಾರು ನಾಲ್ಕು ವರ್ಷಗಳ ಹಿಂದೆ ಕಟ್ಟಡವನ್ನು ನಿರ್ಮಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಜತೆಗೆ, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್) ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ರಾಜ್ ಕಿಶೋರ್ (27), ರುದ್ರ ಯಾದವ್ (24) ಮತ್ತು ಜಗರುಪ್ ಸಿಂಗ್ (35) ಎಂದು ಗುರುತಿಸಲಾದ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಕಮಿಷನರ್ ಜಿ.ಎಸ್. ನವೀನ್ ಕುಮಾರ್ ತಿಳಿಸಿದ್ದಾರೆ.
ಘಟನೆ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ಸೂಚಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವುದರ ಜತೆಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.