ಹೈದರಾಬಾದ್: ಇಲ್ಲಿನ ನಾಂಪಲ್ಲಿ ಪ್ರದೇಶದಲ್ಲಿ ಐದು ಅಂತಸ್ತಿನ ಕಟ್ಟಡವೊಂದಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ ಒಂಬತ್ತು ಮಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಸೋಮವಾರ ಬೆಳಿಗ್ಗೆ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಲ್ಲಿ ರಾಸಾಯನಿಕಗಳನ್ನು ತುಂಬಿದ್ದ ಡ್ರಮ್‌ಗಳನ್ನು ಇಡಲಾಗಿತ್ತು. ಇದರಿಂದಾಗಿ ಬೆಂಕಿಯು ಮೊದಲ ಮತ್ತು ಎರಡನೇ ಮಹಡಿಗೆ ವ್ಯಾಪಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಿಂದ 21ಮಂದಿಯನ್ನು ರಕ್ಷಿಸಲಾಗಿತ್ತು. ಈ ಪೈಕಿ 10 ಮಂದಿ ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಕಿಟಕಿಗಳ ಮೂಲಕ ಜನರನ್ನು ಸ್ಥಳಾಂತರಿಸಿ, ವ್ಯಾಪಿಸುತ್ತಿದ್ದ ಬೆಂಕಿಯನ್ನು ತಹಬದಿಗೆ ತಂದಿದೆ.
ಈ ಮಧ್ಯೆ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿ, ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ. ರಾಜ್ಯಪಾಲೆ ತಮಿಳ್‌ಇಸೈ ಸೌಂದರರಾಜನ್ ಸಹ ಅವಘಡಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.