ನವದೆಹಲಿ: ದೆಹಲಿಯ ಹೊರವಲಯದ ಅಲಿಪುರದಲ್ಲಿರುವ ಬಣ್ಣ (ಪೇಂಟ್) ತಯಾರಿಕೆ ಕಾರ್ಖಾನೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲಿಪುರದ ದಯಾಲ್‌ಪುರ ಮಾರುಕಟ್ಟೆಯಲ್ಲಿರುವ ಕಾರ್ಖಾನೆಯಲ್ಲಿ ಸುಟ್ಟು ಕರಕಲಾದ 11 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಜತೆಗೆ ರಕ್ಷಣಾ ಕಾರ್ಯಾಚರಣೆಯ ವೇಳೆ ಗಾಯಗೊಂಡಿದ್ದ ಒಬ್ಬ ಪೊಲೀಸ್ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕಾರ್ಖಾನೆಯಲ್ಲಿ ಇರಿಸಲಾಗಿದ್ದ ರಾಸಾಯನಿಕಗಳಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಫೋಟದಿಂದಾಗಿ ಕೆಲವು ಮನೆಗಳು ಮತ್ತು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ರಾತ್ರಿ 9 ಗಂಟೆಯ ವೇಳೆಗೆ ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಕೆಲವರು ನಾಪತ್ತೆಯಾಗಿರುವ ಸಾಧ್ಯತೆ ಇದೆ. ಹಾಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.