ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ವರದಿಯಾಗಿದೆ.
ಪಶ್ಚಿಮ ದೆಹಲಿಯ ದ್ವಾರಕಾ ಮೋರ್, ಉತ್ತಮ್ ನಗರ ವ್ಯಾಪ್ತಿಯಲ್ಲಿ ಬೃಹತ್ ಮರವೊಂದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವೆಡೆ ಕಟ್ಟಡಗಳಿಗೆ ಹಾನಿಯಾಗಿದ್ದು, 17 ಮಂದಿ ಗಾಯಗೊಂಡಿದ್ದಾರೆ. ಮರಗಳು ಬಿದ್ದಿರುವ ಬಗ್ಗೆ 152, ಕಟ್ಟಡಗಳ ಹಾನಿಗೆ ಸಂಬಂಧಿಸಿ 55, ವಿದ್ಯುತ್ ವ್ಯತ್ಯಯಕ್ಕೆ ಸಂಬಂಧಿಸಿ 202 ಕರೆಗಳು ಬಂದಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೆಹಲಿಯ ಹಲವೆಡೆ ಇಂದು ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೈಪುರಕ್ಕೆ ಬಂದಿಳಿದ ವಿಮಾನಗಳು
ದೆಹಲಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾದ ಕಾರಣ ವಿಮಾನಗಳು ಇಳಿಯಲು ಸಾಧ್ಯವಾಗಲಿಲ್ಲ. ಹಾಗಾಗಿ ಜೈಪುರ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು.
ದೆಹಲಿಯಲ್ಲಿ ಇಳಿಯಬೇಕಾಗಿದ್ದ 9 ವಿಮಾನಗಳು ಜೈಪುರ ವಿಮಾನ ನಿಲ್ದಾಣದಲ್ಲಿ ಇಳಿದಿವೆ ಎಂದು ದೆಹಲಿ ಅಂತರರಾಷ್ಟ್ರೀಯ ವಿಮಾನದ ವಕ್ತಾರರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.