ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಬೆಲ್ದಂಗದಲ್ಲಿ ಎರಡು ಗುಂಪುಗಳ ನಡುವೆ ಭಾನುವಾರ ರಾತ್ರಿಯಿಡೀ ನಡೆದ ಘರ್ಷಣೆಯಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, 17 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂದು ಸಮುದಾಯದ ಧಾರ್ಮಿಕ ಸಮಾರಂಭದಲ್ಲಿ ಆಪಾದಿತ ನಿಂದನೀಯ ಹೇಳಿಕೆಯನ್ನು ಪ್ರದರ್ಶಿಸಿದ್ದರಿಂದ ಮತ್ತೊಂದು ಸಮುದಾಯದ ಭಾವನೆಗಳಿಗೆ ಧಕ್ಕೆಯುಂಟಾಗಿ ಘರ್ಷಣೆ ಸಂಭವಿಸಿದೆ. ಧಾರ್ಮಿಕ ಸಮಾರಂಭವನ್ನು ಆಯೋಜಿಸಿದ್ದ ಸಮಿತಿಯ ಅಧ್ಯಕ್ಷ ಮತ್ತು ಕಾರ್ಯದರ್ಶಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಎರಡು ಗುಂಪುಗಳ ಜನರ ನಡುವಿನ ಘರ್ಷಣೆಯ ನಂತರ ಹಲವಾರು ಮನೆಗಳನ್ನು ದೋಚಲಾಗಿದ್ದು, ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಬೆಲ್ದಂಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ಕರ್ಫ್ಯೂ ಜಾರಿ ಮಾಡಿದ್ದು, ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘರ್ಷಣೆಯಲ್ಲಿ ಗಾಯಗೊಂಡಿರುವ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂಸಾಚಾರ ಸಂಬಂಧ 17 ಮಂದಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಿಂಸಾಚಾರ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಶಾಂತಿ ಕದಡಲು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ನಕಲಿ ಪೋಸ್ಟ್‌ಗಳನ್ನು ನಂಬಬೇಡಿ. ಕಾನೂನು ಉಲ್ಲಂಘಿಸುವವರ ವಿರುದ್ಧ ಮತ್ತು ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳ ಪೊಲೀಸರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಘಟನೆ ಸಂಬಂಧ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಪರಸ್ಪರ ವಾಗ್ದಾಳಿ ನಡೆಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.