ಲಖನೌ: ಲೋಕಸಭೆ ಚುನಾವಣೆಗೂ ಮುನ್ನ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಗಳನ್ನು ಬಿಎಸ್‌ಪಿ ನಾಯಕಿ, ಮಾಜಿ ಮುಖ್ಯಮಂತ್ರಿ ಮಾಯಾವತಿ ತಳ್ಳಿಹಾಕಿದ್ದಾರೆ.
ಪಕ್ಷವು ತನ್ನ ಸ್ವಂತ ಬಲದಿಂದ ಏಕಪಕ್ಷೀಯವಾಗಿ ಚುನಾವಣೆ ಎದುರಿಸಲಿದೆ ಎಂದು ಪ್ರತಿಪಾದಿಸಿರುವ ಅವರು, ಬಿಎಸ್‌ಪಿ ಕಾರ್ಯಕರ್ತರು ಇಂತಹ ವದಂತಿಗಳ ಬಗ್ಗೆ ಎಚ್ಚರದಿಂದಿರುವಂತೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಬಿಎಸ್‌ಪಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪದೇ ಪದೇ ಘೋಷಿಸುತ್ತಿದ್ದರೂ, ಮೈತ್ರಿ ಕುರಿತು ದಿನದಿಂದ ದಿನಕ್ಕೆ ವದಂತಿಗಳು ಹರಡುತ್ತಿವೆ. ಇದು ಬಿಎಸ್‌ಪಿ ಇಲ್ಲದೆ ಕೆಲವು ಪಕ್ಷಗಳು ಮುನ್ನಡೆ ಸಾಧಿಸಲು ಸಾಧ್ಯವಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ’ ಎಂದು ಹೇಳಿದ್ದಾರೆ.
‘ಸಮಾಜದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಜನರ ಬಲದೊಂದಿಗೆ ಏಕಪಕ್ಷೀಯವಾಗಿ ಸ್ಪರ್ಧಿಸಲು ಬಿಎಸ್‌ಪಿ ನಿರ್ಧರಿಸಿದೆ’ ಎಂದು ಅವರು ತಿಳಿಸಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ, ಸಮಾಜವಾದಿ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.