ಮುಂಬೈ: ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಶಿಂಧೆ ನೇತೃತ್ವದ ಶಿವಸೇನಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಅಧಿಕೃತ ನಿವಾಸ ‘ವರ್ಷಾ’ದಲ್ಲಿ ಇಂದು (ಭಾನುವಾರ) ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಶಿವಸೇನಾಗೆ ಮಿಲಿಂದ್ ಸೇರಿದ್ದಾರೆ.
ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಮಿಲಿಂದ್ ಕಾಂಗ್ರೆಸ್ ಜತೆಗೆ ಮುನಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಪಕ್ಷಕ್ಕೆ ಬರುವಂತೆ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಬಹಿರಂಗ ಆಹ್ವಾನ ನೀಡಿತ್ತು.
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಅವರು, 'ನನ್ನ ರಾಜಕೀಯ ಪ್ರಯಾಣದಲ್ಲಿ ಮಹತ್ವದ ಅಧ್ಯಾಯವೊಂದು ಮುಕ್ತಾಯಗೊಂಡಿದೆ. ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಜೊತೆಗಿನ ನನ್ನ ಕುಟುಂಬದ 55 ವರ್ಷಗಳ ಬಾಂಧವ್ಯವನ್ನು ಕೊನೆಗೊಳಿಸಿದ್ದೇನೆ. ನಮ್ಮನ್ನು ಬೆಂಬಲಿಸಿದ ಎಲ್ಲ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಞನಾಗಿದ್ದೇನೆ' ಎಂದು ಬರೆದುಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.