ನಾಡಿಯಾ: ‘ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹಂಸಖಾಲಿ ಎಂಬಲ್ಲಿ ಇತ್ತೀಚೆಗೆ ಹುಟ್ಟುಹಬ್ಬ ಸಮಾರಂಭವೊಂದರಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸಂತ್ರಸ್ತೆ ಮೃತಪಟ್ಟಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ಪಕ್ಷದ ಪಂಚಾಯಿತಿ ಸದಸ್ಯನ ಮಗ ಎಂದು ಬಾಲಕಿಯ ಕುಟುಂಬ ಆರೋಪಿಸಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ನಡೆದು ನಾಲ್ಕು ದಿನಗಳ ಬಳಿಕ ಬಾಲಕಿಯ ಪೋಷಕರು ಶನಿವಾರ ಹಂಸಖಾಲಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ.
‘9ನೇ ತರಗತಿ ಓದುತ್ತಿದ್ದ ಬಾಲಕಿ ಇತ್ತೀಚೆಗೆ ಆರೋಪಿಯ ಹುಟ್ಟುಹಬ್ಬದ ಸಮಾರಂಭದಲ್ಲಿ ಭಾಗವಹಿಸಲು ಆತನ ಮನೆಗೆ ಹೋಗಿದ್ದಳು. ಆದರೆ ಅವಳು ಅಸ್ವಸ್ಥಳಾಗಿ ಮನೆಗೆ ಮರಳಿದ್ದಳು. ನಂತರ ಮೃತಪಟ್ಟಿದ್ದಾಳೆ’ ಎಂದು ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
‘ಸ್ಥಳೀಯ ಟಿಎಂಸಿ ನಾಯಕನ ಮಗನ ನಿವಾಸದಲ್ಲಿ ನಡೆದ ಪಾರ್ಟಿಯಲ್ಲಿ ಭಾಗಿಯಾಗಿ ಹಿಂದಿರುಗಿದ ನಮ್ಮ ಮಗಳಿಗೆ ತೀವ್ರವಾಗಿ ರಕ್ತಸ್ರಾವವಾಗುತ್ತಿತ್ತು. ಅತಿಯಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಆಕೆ ಮೃತಪಟ್ಟಿದ್ದಾಳೆ’ ಎಂದು ಪೋಷಕರು ಆರೋಪಿಸಿದ್ದಾರೆ.
‘ಆರೋಪಿ ಮತ್ತು ಅವನ ಸ್ನೇಹಿತರು ನಮ್ಮ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂಬುದು ಹಲವರನ್ನು ವಿಚಾರಿಸಿದ ಬಳಿಕ ನಮಗೆ ಖಚಿತವಾಗಿದೆ‘ ಎಂದು ಬಾಲಕಿ ತಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆಕೆಯ ಮರಣೋತ್ತರ ಪರೀಕ್ಷೆ ಪ್ರಮಾಣ ಪತ್ರ ಸಿಗುವ ಮೊದಲೇ ಜನರ ಗುಂಪೊಂದು ಮಗಳ ಶವವನ್ನು ಅಂತಿಮಸಂಸ್ಕಾರಕ್ಕೆ ಬಲವಂತವಾಗಿ ಕೊಂಡೊಯ್ದಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಟಿಎಂಸಿಯ ಹಿರಿಯ ನಾಯಕ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಶಶಿ ಪಂಜ, ‘ಅಪ್ರಾಪ್ತರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸರ್ಕಾರ ಸಹಿಸುವುದಿಲ್ಲ’ ಎಂದು ಹೇಳಿದ್ದಾರೆ.
‘ಈ ಪ್ರಕರಣದಲ್ಲಿ ಯಾವ ರಾಜಕೀಯವೂ ಇಲ್ಲ. ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸಲಿದ್ದಾರೆ’ ಎಂದು ಅವರು ಹೇಳಿದರು.
ಈ ಮಧ್ಯೆ, ಘಟನೆ ಖಂಡಿಸಿ ಪ್ರತಿಪಕ್ಷ ಬಿಜೆಪಿ ಹಂಸಖಾಲಿಯಲ್ಲಿ 12 ಗಂಟೆಗಳ ಬಂದ್‌ಗೆ ಕರೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.