ಜಲ್ನಾ: ಒಂಬತ್ತು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೊಬ್ಬ ಮಾದಕ ವಸ್ತು ನೀಡಿ, ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ನಗರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಚಂದನ್‌ಜಿರಾ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಮೊದಲು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಛತ್ರಪತಿ ಸಂಭಾಜಿನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಅವರು ಹೇಳಿದ್ದಾರೆ.
‘ಸಂತ್ರಸ್ತೆ ಅಪಾಯದಿಂದ ಪಾರಾಗಿದ್ದಾಳೆ. ಪ್ರಕರಣ ಸಂಬಂಧ ಐದು ಮಂದಿಯನ್ನು ಬಂಧಿಸಲಾಗಿದೆ. ಒಬ್ಬ ವ್ಯಕ್ತಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ.
ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಛತ್ರಪತಿ ಸಂಭಾಜಿನಗರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು ಎಂದು ಅವರು ಹೇಳಿದ್ದಾರೆ.
‘ಬಾಲಕಿ ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಆಕೆಯನ್ನು ಮನೆಯಿಂದ ಕರೆದೊಯ್ದು ಮಾದಕ ವಸ್ತು ನೀಡಿ ಅತ್ಯಾಚಾರ ಎಸಗಲಾಗಿದೆ. ಬಳಿಕ ಆಕೆಯನ್ನು ಕರೆತಂದು ಬೀದಿಯಲ್ಲಿ ಬಿಟ್ಟು ಹೋಗಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.