ನವದೆಹಲಿ: ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ಶುಕ್ರವಾರ ಸುಪ್ರೀಂ ಕೋರ್ಟ್ ತಡೆ ನೀಡಿರುವುದನ್ನು ಕಾಂಗ್ರೆಸ್ ಸ್ವಾಗತಿಸಿದೆ.
‘ಇದು ದ್ವೇಷದ ವಿರುದ್ಧ ಪ್ರೀತಿಯ ಗೆಲುವು, ಸತ್ಯಮೇವ ಜಯತೆ - ಜೈ ಹಿಂದ್‘ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದನ್ನು ಸ್ವಾಗತಿಸುತ್ತೇವೆ. ನಮಗೆ ನ್ಯಾಯ ಸಿಕ್ಕಿದೆ, ಪ್ರಜಾಪ್ರಭುತ್ವಕ್ಕೆ ಗೆಲುವಾಗಿದ್ದು, ಸಂವಿಧಾನವನ್ನು ಎತ್ತಿಹಿಡಿಯಲಾಗಿದೆ. ಈ ಪ್ರಕರಣದಲ್ಲಿ ಬಿಜೆಪಿ ಪಿತೂರಿ ಸಂಪೂರ್ಣವಾಗಿ ಬಯಲಾಗಿದೆ. ಅವರಿಗೆ, ವಿರೋಧ ಪಕ್ಷಗಳ ನಾಯಕರನ್ನು ದುರುದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ನಿಲ್ಲಿಸುವ ಸಮಯ ಬಂದಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ಈ ತೀರ್ಪಿನಿಂದ ಸಂತಸವಾಗಿದೆ, ಯಾವುದೇ ಶಕ್ತಿಯು ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಇದನ್ನು ಅವರು (ಬಿಜೆಪಿ) ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದನ್ನು ಸ್ವಾಗತಿಸುತ್ತೇವೆ. ನ್ಯಾಯಕ್ಕೆ ಜಯ ಸಿಕ್ಕಿದೆ, ಯಾವುದೇ ಶಕ್ತಿಯು ಜನರ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.
ಮೋದಿ ಉಪನಾಮ ಬಗ್ಗೆ ತಾವು ನೀಡಿದ ಹೇಳಿಕೆಗೆ ಸಂಬಂಧ ಗುಜರಾತ್‌ನ ಸೂರತ್ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ರದ್ದು ಮಾಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
2019ರ ಲೋಕಸಭೆ ಚುನಾವಣೆ ವೇಳೆ ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ, ‘ಕಳ್ಳರೆಲ್ಲರಿಗೂ ಮೋದಿ ಉಪನಾಮ ಏಕಿರುತ್ತದೆ‘ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರು.
ಇದನ್ನೂ ಓದಿ...
ಮೋದಿ ಉಪನಾಮ ವಿವಾದ: ರಾಹುಲ್ ಗಾಂಧಿ ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್
ಈ ಹೇಳಿಕೆಯಿಂದ ಮೋದಿ ಸಮುದಾಯಕ್ಕೆ ಅವಮಾನವಾಗಿದೆ ಎಂದು ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಎಂಬವರು ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ರಾಹುಲ್ ಗಾಂಧಿ ಅವರನ್ನು ತಪ್ಪಿತಸ್ಥ ಎಂದು ಘೋಷಣೆ ಮಾಡಿ 2 ವರ್ಷಗಳ ಸಜೆ ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರ ಲೋಕಸಭಾ ಸದಸ್ಯತ್ವವನ್ನೂ ರದ್ದು ಮಾಡಲಾಗಿತ್ತು.
ಸೂರತ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಕೆಳ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ತಡೆ ನೀಡಬೇಕು ಎಂದು ಕೋರಿದ್ದರು. ಆದರೆ ಹೈಕೋರ್ಟ್ ಅವರ ಅರ್ಜಿಯನ್ನು ತಳ್ಳಿ ಹಾಕಿತ್ತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.