ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ಸಂಜೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 6 ಕಿ. ಮೀ ಉದ್ದದ ರೋಡ್ ಶೋ ನಡೆಸಲಿದ್ದಾರೆ.
ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಳೆ (ಮಂಗಳವಾರ) ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಗಂಗಾ ನದಿಯಲ್ಲಿ ಸ್ನಾನ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ನಗರದ ಮಾಳವೀಯಾ ಚೌರಾಹಾದಿಂದ ಶ್ರೀ ಕಾಶಿ ವಿಶ್ವನಾಥ ಧಾಮದವರೆಗೆ ರೋಡ್ ಶೋ ನಡೆಯಲಿದೆ. ಸುಮಾರು 5,000ಕ್ಕೂ ಹೆಚ್ಚು ಮಹಿಳೆಯರು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಸಚಿವರು ಮತ್ತು ಶಾಸಕರು ಕೂಡ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ರೋಡ್ ಶೋ ಮುಗಿದ ಬಳಿಕ ರಾತ್ರಿ ಬಿಎಲ್‌ಡಬ್ಲೂ ಅತಿಥಿಗೃಹದಲ್ಲಿ ಪ್ರಧಾನಿ ಮೋದಿ ಅವರು ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ಹೇಳಿವೆ.
ಪ್ರಧಾನಿ ಮೋದಿ ಅವರು ಸತತ ಮೂರನೇ ಬಾರಿಗೆ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ಲೋಕಸಭಾ ಚುನಾವಣೆಯ ಕೊನೆಯ ಹಾಗೂ 7ನೇ ಹಂತದಲ್ಲಿ ಜೂನ್ 1ರಂದು ವಾರಾಣಸಿ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಕಾಂಗ್ರೆಸ್ ಪಕ್ಷವು ಇಲ್ಲಿ ತನ್ನ ರಾಜ್ಯ ಘಟಕದ ಅಧ್ಯಕ್ಷ ಅಜಯ್ ರಾಯ್ ಅವರನ್ನು ಸ್ಪರ್ಧೆಗಿಳಿಸಿದೆ. ಬಿಎಸ್‌ಪಿಯ ಅತ್ತರ್ ಜಮಾಲ್ ಅವರೂ ಕಣದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.