ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓಕ್ಲಾ ವಿಧಾನಸಭಾ ಕ್ಷೇತ್ರದ ಎಎಪಿ ಶಾಸಕ, ದೆಹಲಿ ವಕ್ಫ್ ಮಂಡಳಿ ಅಧ್ಯಕ್ಷ ಅಮಾನತುಲ್ಲಾ ಖಾನ್ ಗುರುವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ವಿಚಾರಣೆಗೆ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ವಕ್ಫ್ ಮಂಡಳಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಖಾನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯವು, ಏ.18ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ಸಿಬಿಐ ಅಮಾನುತುಲ್ಲಾ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ದೆಹಲಿ ಪೊಲೀಸರು ಸಹ ಮೂರು ಪ್ರಕರಣ ದಾಖಲಿಸಿದ್ದಾರೆ.
ಶಾಸಕರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸಿದ್ದ ಇ.ಡಿ, ‘ದೆಹಲಿ ವಕ್ಫ್ ಮಂಡಳಿಗೆ ಕಾನೂನುಬಾಹಿರವಾಗಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ವೇಳೆ ನಗದು ರೂಪದಲ್ಲಿ ಹಣದ ವಹಿವಾಟು ನಡೆದಿದ್ದು, ಇದನ್ನು ಸಹಚರರ ಹೆಸರಿನಲ್ಲಿ ಸ್ಥಿರ ಆಸ್ತಿ ಖರೀದಿಸಲು ಹೂಡಿಕೆ ಮಾಡಿದ್ದಾರೆ’ ಎಂದು ತಿಳಿಸಿದೆ.
‘ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದು ಖಾನ್ ವರದಿಗಾರರಿಗೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.