ಗ್ಯಾಂಗ್ಟಕ್: ಸಿಕ್ಕಿಂನ ಲಾಚುಂಗ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿದ್ದ 200ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಿಸಲಾಗಿದ್ದು, ಇನ್ನೂ ಸಾವಿರಕ್ಕೂ ಹೆಚ್ಚು ಜನರು ಅಲ್ಲಿಯೇ ಸಿಲುಕಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಪ್ರವಾಸಿಗರನ್ನು ಚುಂಗ್‌ಥಾಂಗ್ ಮೂಲಕ ಮಂಗನ್ ಪಟ್ಟಣಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲಿಂದ ಅವರನ್ನು ಗ್ಯಾಂಗ್ಟಕ್‌ಗೆ ಕರೆದೊಯ್ಯಲು ಸಾರಿಗೆ ಇಲಾಖೆಯಿಂದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
ಸೋಮವಾರ 150 ಹಾಗೂ ಮಂಗಳವಾರ 64 ಪ್ರವಾಸಿಗರನ್ನು ಸ್ಥಳಾಂತರಿಸಲಾಗಿದೆ. ಉಳಿದವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ. ಭಾರಿ ಮಳೆ, ಭೂಕುಸಿತದಿಂದ ಈವರೆಗೆ ಆರು ಜನ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.
ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಇತರ ಸ್ವಯಂಸೇವಕರೊಂದಿಗೆ ಜಿಲ್ಲಾಡಳಿತವು ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸುತ್ತಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.