ಭೋಪಾಲ್ (ಮಧ್ಯಪ್ರದೇಶ): ಸಿಂಗ್ರೌಲಿ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿ ಸೌಮ್ಯ ತೆರೆದ ಕೊಳವೆ ಬಾವಿಗೆ ಬಿದ್ದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಘಟನೆ ಸಂಬಂಧ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಜನಪಾದ್ ಪಂಚಾಯತ್ ಚಿತ್ರಂಗಿ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದು ಬಾಲಕಿ ಮೃತಪಟ್ಟಿರುವುದು ದುರದೃಷ್ಟಕರ. ಪ್ರಕರಣ ಸಂಬಂಧ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಸಿಂಗ್ರೌಲಿ ಜಿಲ್ಲೆಯ ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ವಿಭಾಗದ ಸಹಾಯಕ ಎಂಜಿನಿಯರ್ ಮತ್ತು ಜನಪಾದ್ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸುವಂತೆ ಸೂಚನೆ ನೀಡಲಾಗಿದೆ. ಮುಂದೆ ಇಂತಹ ಅಹಿತಕರ ಘಟನೆ ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟಪಡಿಸಲಾಗಿದೆ’ ಎಂದರು ತಿಳಿಸಿದ್ದಾರೆ.
ಹೊಲದಲ್ಲಿ ಆಟವಾಡುತ್ತಿದ್ದ ಬಾಲಕಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದಾಳೆ. ಸತತ ಐದೂವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಆಕೆಯನ್ನು ಹೊರತರಲಾಯಿತು. ಆದರೆ, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
250 ಅಡಿಗೂ ಹೆಚ್ಚು ಆಳವಿದ್ದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕಿಯು 25 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.