ಮುಂಬೈ: ನಗರದ ವರ್ಲಿಯಲ್ಲಿ ಈಚೆಗೆ ಸಂಭವಿಸಿದ ಬಿಎಂಡಬ್ಲ್ಯು ಕಾರು ಅಪಘಾತ ಪ್ರಕರಣ ಸಂಬಂಧ ಶಿವಸೇನಾ (ಶಿಂದೆ ಬಣ) ಮುಖಂಡ ರಾಜೇಶ್ ಶಾ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ.
ರಾಜೇಶ್ ಶಾ ಪುತ್ರ ಚಾಲನೆ ಮಾಡುತ್ತಿದ್ದರು ಎನ್ನಲಾದ ಬಿಎಂಡಬ್ಲ್ಯು ಕಾರು ಮುಂಬೈನ ವರ್ಲಿ ಪ್ರದೇಶದಲ್ಲಿ ಭಾನುವಾರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟಿದ್ದು, ಆಕೆಯ ಪತಿ ಗಾಯಗೊಂಡಿದ್ದರು.
ಮೃತರನ್ನು ವರ್ಲಿ ನಿವಾಸಿ ಕಾವೇರಿ ನಖವಾ (45) ಎಂದು ಗುರುತಿಸಲಾಗಿದ್ದು, ಅವರ ಪತಿ ಪ್ರದೀಕ್ ನಖವಾ (50) ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು. ಈ ಘಟನೆಯು ಮಹಾರಾಷ್ಟ್ರದಲ್ಲಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿತ್ತು.
ರಾಜೇಶ್ ಅವರು ಶಿವಸೇನಾದ ಪಾಲ್ಗರ್ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಆದೇಶದ ಮೇರೆಗೆ ರಾಜೇಶ್ ಅವರನ್ನು ವಜಾಗೊಳಿಸಲಾಗಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ಮದ್ಯ ಕುಡಿದು ಕಾರು ಚಾಲನೆ ಮಾಡಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಇಂತಹದ್ದೇ ಘಟನೆಗಳು ಈ ಹಿಂದೆ ಪುಣೆ ಮತ್ತು ನಾಗ್ಪುರದಲ್ಲಿ ನಡೆದಿದ್ದವು.
ಆರೋಪಿ ಸೆರೆ
ಬಿಎಂಡಬ್ಲ್ಯು ಕಾರು ಅಪಘಾತಕ್ಕೀಡಾದ ನಂತರ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆರೋಪಿಯ ಬಂಧನಕ್ಕಾಗಿ 11 ತಂಡಗಳನ್ನು ರಚಿಸಿದ್ದ ಪೊಲೀಸರು, ಲುಕ್ ಔಟ್ ನೋಟಿಸ್ ಹೊರಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.