ಮುಜಾಫರ್‌ನಗರ: ರೈತ ಸಂಘಟನೆಗಳ ಕೆಲವು ಹೋರಾಟಗಾರರ ಬಂಧನವನ್ನು ವಿರೋಧಿಸಿ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಮಂಗಳವಾರ ತನ್ನ ಕೆಲವು ಬೆಂಬಲಿಗರೊಂದಿಗೆ ಪೊಲೀಸ್ ಠಾಣೆಯ ಎದುರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಡೆದ ಗಲಾಟೆ ಸಂಬಂಧ ಭಾರತೀಯ ಕಿಸಾನ್ ಯೂನಿಯನ್‌ನ (ಬಿಕೆಯು) 10 ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋತ್ವಾಲಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಕೈಗೊಂಡಿರುವ ಟಿಕಾಯತ್, ರೈತ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು. ಅವರನ್ನು ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ ಎಂದು ದೂರಿದ್ದಾರೆ.
ಈ ಹಿಂದೆ ಘರ್ಷಣೆಯಲ್ಲಿ ಗಾಯಗೊಂಡಿರುವವರನ್ನು ತಕ್ಷಣವೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಬಿಕೆಯು ನಾಯಕರು ಒತ್ತಾಯಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ಗುಂಪುಗಳ ಜನರು ಆಸ್ಪತ್ರೆಗೆ ಬಂದಿದ್ದರು. ಒಂದು ಗುಂಪಿನ ವೈದ್ಯಕೀಯ ಪರೀಕ್ಷೆ ನಡೆಯುತ್ತಿರುವಾಗ, ಬಿಕೆಯು ಕಾರ್ಯಕರ್ತರು ಇನ್ನೊಂದು ಗುಂಪಿನ ಪರೀಕ್ಷೆಗೆ ಒತ್ತಾಯಿಸಲು ಪ್ರಾರಂಭಿಸಿದರು. ಇದು ಘರ್ಷಣೆಗೆ ಕಾರಣವಾಯಿತು ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬಾಬುರಾಮ್ ತಿಳಿಸಿದ್ದಾರೆ.
ಬಿಕೆಯು ರಾಷ್ಟ್ರೀಯ ವಕ್ತಾರರೂ ಆಗಿರುವ ಟಿಕಾಯತ್ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಅಧಿಕಾರಿಗಳು ಕಾರ್ಯಕರ್ತರನ್ನು ತಪ್ಪಾಗಿ ಪ್ರಕರಣದಲ್ಲಿ ಸಿಲುಕಿಸುವ ಮೂಲಕ ನಮ್ಮ ಸಂಘಟನೆಯನ್ನು ಹತ್ತಿಕ್ಕಲು ಬಯಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಜನರ ಜೊತೆಗಿದ್ದ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸ್ಥಳದಲ್ಲಿ ಪೊಲೀಸರು ಮತ್ತು ಪಿಎಸಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.