ಭೋಪಾಲ್: ಕಾಂಗ್ರೆಸ್ ಮುಖಂಡ ಕಮಲ್‌ನಾಥ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ತಿಳಿಸಿದ್ದಾರೆ.
ಕಮಲ್‌ನಾಥ್ ಕಾಂಗ್ರೆಸ್ ಪಕ್ಷದಿಂದ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ. ಅವರು ಪಕ್ಷವನ್ನು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಕಮಲ್‌ನಾಥ್ ಅವರು ಪುತ್ರ ಹಾಗೂ ಸಂಸದ ನಕುಲ್ ನಾಥ್ ಅವರೊಂದಿಗೆ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಎಂಬ ಊಹಾಪೋಹಗಳ ಬೆನ್ನಲ್ಲೇ ಸಿಂಗ್ ಈ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವೆಲ್ಲರೂ ಕಮಲ್‌ನಾಥ್ ಅವರನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಮೂರನೇ ಪುತ್ರ ಎಂದು ಭಾವಿಸಿದ್ದೆವು’ ಎಂದು ತಿಳಿಸಿದ್ದಾರೆ.
ನಾನು ಮತ್ತು ಇತರ ಕಾಂಗ್ರೆಸ್ ನಾಯಕರು ಕಮಲ್‌ನಾಥ್ ಅವರೊಂದಿಗೆ ಸಂಪರ್ಕದಲ್ಲಿರುವುದಾಗಿ ಅವರು ಹೇಳಿದ್ದಾರೆ.
'ಕಮಲ್‌ನಾಥ್ ಅವರು ಯಾವಾಗಲೂ ಕಾಂಗ್ರೆಸ್ ಜತೆಗಿದ್ದರು. ಅವರು ನಿಜವಾದ ಕಾಂಗ್ರೆಸ್ ನಾಯಕರಾಗಿದ್ದಾರೆ. ಮುಖ್ಯಮಂತ್ರಿ, ಕೇಂದ್ರ ಸಚಿವ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಸೇರಿದಂತೆ ಅವರು ಎಲ್ಲಾ ಹುದ್ದೆಗಳನ್ನು ಅಲಂಕರಿಸಿದ್ದಾರೆ’ ಎಂದು ಸಿಂಗ್ ತಿಳಿಸಿದ್ದಾರೆ.
‘ಕಮಲ್‌ನಾಥ್ ಅವರು ಕೇಂದ್ರೀಯ ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ (ಇ.ಡಿ), ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಕೇಂದ್ರೀಯ ತನಿಖಾ ದಳದ (ಸಿಬಿಐ) ಒತ್ತಡಕ್ಕೆ ಮಣಿಯುವುದಿಲ್ಲ. ಇವೆಲ್ಲಾ ಊಹಾಪೋಹಗಳಷ್ಟೇ ಏಕೆಂದರೆ, ಕಮಲ್‌ನಾಥ್ ಇನ್ನೂ ಬಿಜೆಪಿಗೆ ಸೇರ್ಪಡೆಗೊಂಡಿಲ್ಲ ಅಥವಾ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ’ ಎಂದು ಅವರು ಪ್ರತಿಪಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.