ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ ಭಾನುವಾರ ಮೃತಪಟ್ಟಿದ್ದಾರೆ.
ಸೆಪ್ಟೆಂಬರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಮೀರ್ ತೀವ್ರವಾಗಿ ಗಾಯಗೊಂಡಿದ್ದರು.
ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್/ಟ್ವಿಟರ್‌ನಲ್ಲಿ ಸಾವಿನ ಸುದ್ದಿ ತಿಳಿಸಿರುವ ನವಾಬ್, ದುಃಖದ ಸಂದರ್ಭದಲ್ಲಿ ಮುಂದಿನ ಎರಡು ದಿನಗಳಿಗೆ ನಿಗದಿಯಾಗಿದ್ದ ನನ್ನ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ನವಾಬ್ ಸ್ಪರ್ಧೆ; ಬಿಜೆಪಿಗೆ ಮುಜುಗರ
ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಿರಿಯ ನಾಯಕ ನವಾಬ್ ಮಲಿಕ್ ಅವರು ಮುಂಬೈನ ಮನ್‌ಖುರ್ದ್ ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಕಣಕ್ಕಿಳಿದಿದ್ದಾರೆ.
ಅಜಿತ್ ಪವಾರ್ ಪಕ್ಷವು, ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಶಿವಸೇನಾ ಹಾಗೂ ಬಿಜೆಪಿ ನೇತೃತ್ವದ ಆಡಳಿತಾರೂಢ 'ಮಹಾಯುತಿ' ಮೈತ್ರಿಕೂಟದಲ್ಲಿದೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ನಂಟು ಹೊಂದಿರುವ ಆರೋಪ ಎದುರಿಸುತ್ತಿರುವ ನವಾಬ್‌ಗೆ ಎನ್‌ಸಿಪಿ ಟಿಕೆಟ್ ನೀಡಿರುವುದು ಬಿಜೆಪಿಗೆ ಇರಿಸುಮುರಿಸು ಮಾಡಿದೆ.
ಮುಜುಗರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವ ಬಿಜೆಪಿ, ಚುನಾವಣೆಯಲ್ಲಿ ನವಾಬ್ ಪರ ಪ್ರಚಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ನವಾಬ್ ಅವರು ಕಳೆದ ಸಲ ಗೆದ್ದಿದ್ದ ಅನುಶಕ್ತಿ ನಗರ ಕ್ಷೇತ್ರದಿಂದ, ಅವರ ಪುತ್ರಿ ಸನಾ ಮಲಿಕ್ ಅವರು ಎನ್‌ಸಿಪಿ ಟಿಕೆಟ್ ಗಿಟ್ಟಿಸಿದ್ದಾರೆ. ಸನಾ ಅವರಿಗೆ ಇದು ಮೊದಲ ಚುನಾವಣೆಯಾಗಿದೆ.
288 ಸದಸ್ಯ ಬಲದ 'ಮಹಾ' ವಿಧಾನಸಭೆಗೆ ನವೆಂಬರ್ 20ರಂದು ಮತದಾನ ನಡೆಯಲಿದೆ. 23ರಂದು ಫಲಿತಾಂಶ ಪ್ರಕಟವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.