ನವದೆಹಲಿ: ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು(ಎನ್‌ಸಿಡಬ್ಲ್ಯು) ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ವಿಭವ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ವಿಭವ್ ಕುಮಾರ್ ವಿಚಾರಣೆ ನಿಗದಿಯಾಗಿದೆ.
ಅರವಿಂದ ಕೇಜ್ರಿವಾಲ್ ಅವರ ಮನೆಯಲ್ಲಿ ಅವರ ಆಪ್ತ ಸಹಾಯಕ ವಿಭವ್ ಕುಮಾರ್ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಅವರು ಹೇಳಿಕೆ ನೀಡಿರುವ ಕುರಿತಂತೆ ಮಾಧ್ಯಮಗಳ ವರದಿ ಆಧರಿಸಿ ಎನ್‌ಸಿಡಬ್ಲ್ಯು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದಿದ್ದರೆ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಆಯೋಗ ಒತ್ತಿ ಹೇಳಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಚೇರಿಯ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾದ ವಿಭವ್ ಕುಮಾರ್ ಹಲ್ಲೆ ನಡೆಸಿದ್ದಾರೆಂಬ ವಿಷಯ ಭಾರಿ ಸುದ್ದಿಯಾಗಿತ್ತು.
ಹಲ್ಲೆ ಬಳಿಕ ಮಾಲಿವಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ, ಪೊಲೀಸ್ ಠಾಣೆಗೆ ತೆರಳಿಯೂ ಅಧಿಕೃತ ದೂರು ದಾಖಲಿಸಿರಲಿಲ್ಲ.
ಈ ಸಂಬಂಧ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ್ದ ಸಂಸದ ಸಂಜಯ್ ಸಿಂಗ್, ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣ ಅತ್ಯಂತ ಖಂಡನೀಯ. ವಿಭವ್ ಕುಮಾರ್ ವಿರುದ್ಧ ಸಿಎಂ ಕೇಜ್ರಿವಾಲ್ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.