ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮಿತ್ರ ಪಕ್ಷಗಳಾದ ಎಜೆಎಸ್‌ಯು 10, ಜೆಡಿಯು ಎರಡು ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ ಎಂದು ಅಸ್ಸಾಂ ಮುಖ್ಯಮುಂತ್ರಿಯೂ ಆದ ಬಿಜೆಪಿಯ ಚುನಾವಣಾ ಉಸ್ತುವಾರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.
ಸೀಟು ಹಂಚಿಕೆ ಬಹುತೇಕ ಅಂತಿಮಗೊಂಡಿದೆ. ಆದರೆ, ಜಾರ್ಖಂಡ್ ಮುಕ್ತಿ ಮೋರ್ಚಾ ಸೇರಿದಂತೆ ಇತರ ಪಕ್ಷಗಳು ಇನ್ನೂ ತಮ್ಮ ಕಾರ್ಯತಂತ್ರಗಳನ್ನು ಬಹಿರಂಗಗೊಳಿಸಿಲ್ಲ. ಹೀಗಾಗಿ ನಾವು ಕೂಡ 'ಕಾದು ನೋಡುವ’ ತಂತ್ರವನ್ನು ಅನುಸರಿಸುತ್ತೇವೆ ಎಂದು ಶರ್ಮಾ ತಿಳಿಸಿದರು.
81 ಸದಸ್ಯ ಬಲವಿರುವ ಜಾರ್ಖಂಡ್ ವಿಧಾನಸಭೆಗೆ ನ.13 ಮತ್ತು 20ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, 23ರಂದು ಮತಗಳ ಎಣಿಕೆ ನಡೆಯಲಿದೆ.
ಈಗಿನ ಪ್ರಕಾರ ಬಿಜೆಪಿ 68 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಮಿತ್ರ ಪಕ್ಷಗಳೊಂದಿಗೆ ಮಾತುಕತೆ ಮುಂದುವರಿದಿದ್ದು ಶೀಘ್ರದಲ್ಲೇ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದರು.
‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಅಭಿವೃದ್ಧಿ ಕಾರ್ಯಸೂಚಿ ಮೇಲೆ ಚುನಾವಣೆ ಎದುರಿಸುತ್ತೇವೆ‘ ಎಂದು ಶರ್ಮಾ ತಿಳಿಸಿದರು.
ಈ ವೇಳೆ ಮಾತನಾಡಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಇಂಡಿಯಾ ಒಕ್ಕೂಟ ಚುನಾವಣೆಯಲ್ಲಿ ಸೋಲಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.