ADVERTISEMENT

ಚುನಾವಣಾ ಬಾಂಡ್‌ ಯೋಜನೆ: ‘ಸುಪ್ರೀಂ’ ಮೆಟ್ಟಿಲೇರಿದ ಎನ್‌ಜಿಒ

ಪಿಟಿಐ
Published 27 ಅಕ್ಟೋಬರ್ 2020, 11:05 IST
Last Updated 27 ಅಕ್ಟೋಬರ್ 2020, 11:05 IST
ಸುಪ್ರೀಂ ಕೋರ್ಟ್‌ 
ಸುಪ್ರೀಂ ಕೋರ್ಟ್‌    

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಸ್ವಯಂ ಸೇವಾ ಸಂಸ್ಥೆಯೊಂದು (ಎನ್‌ಜಿಒ) ಚುನಾವಣಾ ಬಾಂಡ್‌ ಯೋಜನೆಯನ್ನು ಪ್ರಶ್ನಿಸಿ ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ರೂಪಿಸಲಾದ ಈ ಯೋಜನೆಯನ್ನು ಪ್ರಶ್ನಿಸಿ2017ರಲ್ಲಿ ತಾನು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆಯನ್ನು ತುರ್ತಾಗಿ ನಡೆಸಬೇಕೆಂದು ಸಂಸ್ಥೆಯು ಮನವಿ ಮಾಡಿದೆ.

ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಹೆಸರಿನ ಸ್ವಯಂ ಸೇವಾ ಸಂಸ್ಥೆಯು ಈ ವರ್ಷದ ಜನವರಿಯಲ್ಲಿ ನಡೆದಿದ್ದ ದೆಹಲಿ ವಿಧಾನಸಭಾ ಚುನಾವಣೆಯ ವೇಳೆಯೂ ಈ ಯೋಜನೆಯನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿತ್ತು. ಈ ಯೋಜನೆಗೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದು ಆಗ ನ್ಯಾಯಾಲಯವು ತಿಳಿಸಿತ್ತು.

ADVERTISEMENT

ಡೆಮಾಕ್ರಟಿಕ್‌ ರಿಫಾರ್ಮ್ಸ್ ಸಂಸ್ಥೆಯು ಜನವರಿ20ರಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಶೀಘ್ರವೇ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ನಂತರ ಈ ಅರ್ಜಿಯ ವಿಚಾರಣೆಯೇ ನಡೆದಿರಲಿಲ್ಲ. ಈಗ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರ ಮುಖಾಂತರ ಹೊಸದಾಗಿ ಅರ್ಜಿ ಸಲ್ಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.