ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಸಂಬಂಧಿಸಿದ ಆದೇಶವನ್ನು ಮೇ 10ರಂದು (ಶುಕ್ರವಾರ) ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಇದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಆಕ್ಷೇಪ ವ್ಯಕ್ತಪಡಿಸಿದೆ.
ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.
ಕೇಜ್ರಿವಾಲ್ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯನ್ನು ವಿರೋಧಿಸಿ ಇ.ಡಿ ಅಫಿಡವಿಟ್ ಸಲ್ಲಿಸಿದೆ. ಕಾನೂನು ಎಲ್ಲರಿಗೂ ಸಮಾನವಾಗಿದೆ. ಚುನಾವಣಾ ಪ್ರಚಾರ ಮೂಲಭೂತ, ಸಾಂವಿಧಾನಿಕ ಅಥವಾ ಕಾನೂನುಬದ್ಧ ಹಕ್ಕಲ್ಲ ಎಂದು ಅದು ಹೇಳಿದೆ.
ಯಾವುದೇ ರಾಜಕೀಯ ನಾಯಕರಿಗೆ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ನೀಡಿಲ್ಲ. ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದರೆ ತಪ್ಪು ನಡವಳಿಗೆ ಕಾರಣವಾಗುತ್ತದೆ ಎಂದು ಇ.ಡಿ ಹೇಳಿದೆ.
ಜಾರಿ ನಿರ್ದೇಶನಾಲಯ (ಇ.ಡಿ) ತಮ್ಮನ್ನು ಬಂಧಿಸಿರುವ ಕ್ರಮ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಮಂಗಳವಾರ ವಿಚಾರಣೆ ನಡೆಸಿತ್ತು.
‘ಮಧ್ಯಂತರ ಜಾಮೀನಿಗೆ ಸಂಬಂಧಿಸಿದ ಮಧ್ಯಂತರ ಆದೇಶವನ್ನು ನಾವು ಶುಕ್ರವಾರ ನೀಡಲಿದ್ದೇವೆ. ಬಂಧನವನ್ನು ಪ್ರಶ್ನಿಸಿರುವ ಪ್ರಮುಖ ಅರ್ಜಿಯನ್ನು ಕೂಡ ಅದೇ ದಿನ ಕೈಗೆತ್ತಿಕೊಳ್ಳಲಾಗುತ್ತದೆ’ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.