ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಸಿಪಿ ಮುಖಂಡ ನವಾಬ್ ಮಲೀಕ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಜುಲೈ ಎರಡನೇ ವಾರದಲ್ಲಿ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿದೆ. ‘ಜಾಮೀನು ಅರ್ಜಿಯನ್ನು ಪರಿಗಣಿಸಲು ಬಾಂಬೆ ಹೈಕೋರ್ಟ್‌ಗೆ ಸ್ವಾತಂತ್ರ್ಯವಿದೆ’ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂ.ಎಂ. ಸುಂದರೇಶ್ ಅವರನ್ನೊಳಗೊಂಡ ನ್ಯಾಯಪೀಠವು ಹೇಳಿದೆ.
ಜಾರಿ ನಿರ್ದೇಶನಾಲಯದ (ಇ.ಡಿ) ವಕೀಲರು ಹಾಜರಾಗದ ಕಾರಣ ಬಾಂಬೆ ಹೈಕೋರ್ಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ಜೂನ್ 6ಕ್ಕೆ ನಿಗದಿಪಡಿಸಿದೆ ಎಂದು ಮಲೀಕ್ ಅವರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
ಈ ವಿಚಾರವಾಗಿ ಇ.ಡಿ. ಮುಂದಿನ ವಾರ ಸಿದ್ಧವಿರಲಿದೆ ಎಂದು ಇ.ಡಿ. ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟ್ ಜನರಲ್ ಎಸ್.ವಿ. ರಾಜು ಅವರು ಹೇಳಿದ್ದಾರೆ.
ಹಣ ಅಕ್ರಮ ವರ್ಗಾವಣೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮಲೀಕ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ಅವರೊಂದಿಗೆ ಆಸ್ತಿ ವ್ಯವಹಾರಗಳಲ್ಲಿ ಶಾಮೀಲಾಗಿರುವ ಆರೋಪದಲ್ಲಿ ಮಲೀಕ್ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.