ನವದೆಹಲಿ:ಮಹಾರಾಷ್ಟ್ರದಲ್ಲಿ ಬಿಜೆಪಿ ಜತೆ ಅಧಿಕಾರ ಹಂಚಿಕೆ ಬಿಕ್ಕಟ್ಟು ಎದುರಿಸುತ್ತಿರುವ ಶಿವಸೇನಾಗೆ ಬೆಂಬಲ ನೀಡುವುದಿಲ್ಲ ಎಂದು ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಸ್ಪಷ್ಟಪಡಿಸಿದ್ದಾರೆ.
ಶಿವಸೇನಾಗೆ ಬೆಂಬಲ ನೀಡುವ ಬಗ್ಗೆ ಪಕ್ಷದ ರಾಜ್ಯ ಘಟಕದಲ್ಲಿ ವಿಭಿನ್ನ ಹೇಳಿಕೆಗಳು ಕೇಳಿಬರುತ್ತಿದ್ದಂತೆಯೇ ಮಹಾರಾಷ್ಟ್ರದ ಕೆಲವು ನಾಯಕರ ಜತೆ ಸೋನಿಯಾ ಮಾತುಕತೆ ನಡೆಸಿದ್ದಾರೆ. ಪಕ್ಷದ ಸಿದ್ಧಾಂತಕ್ಕೆ ಸಂಪೂರ್ಣ ಭಿನ್ನವಾಗಿರುವ ಮತ್ತು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿರುವ ಪಕ್ಷಕ್ಕೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ರಾಜ್ಯ ಘಟಕದ ನಾಯಕರಿಗೆ ಸೋನಿಯಾ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್‌ನ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಬಾಳಾಸಾಹೇಬ್ ಥೋರಟ್, ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್, ಹಿರಿಯ ನಾಯಕರಾದ ವಿಜಯ್ ವಡೇಟ್ಟಿವಾರ್ ಮತ್ತು ಮಣಿಕ್‌ರಾವ್ ಠಾಕ್ರೆ ಜತೆ ಸೋನಿಯಾ ಮಾತುಕತೆ ನಡೆಸಿದ್ದಾರೆ.
ಇದಕ್ಕೂ ಮುನ್ನ ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿ ಕಾಂಗ್ರೆಸ್‌ನ ನಾಲ್ವರು ನಾಯಕರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಜತೆ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾತುಕತೆ ನಡೆಸಿದ್ದರು.
ಶಿವಸೇನಾಗೆ ಬೆಂಬಲ ನೀಡುವುದಿಲ್ಲ ಎಂದುಎನ್‌ಸಿಪಿ ಕೂಡ ಈಗಾಗಲೇ ಹೇಳಿದೆ.ಮಹಾರಾಷ್ಟ್ರದ ಜನರು ನಮಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಹೇಳಿದ್ದಾರೆ. ಜನಾದೇಶವನ್ನು ನಾವು ವಿಧೇಯರಾಗಿ ಪಾಲಿಸುತ್ತೇವೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.