ಮುಂಬೈ: ಅಯೋಧ್ಯೆಯ ರಾಮಮಂದಿರದಲ್ಲಿ ನಾಳೆ (ಸೋಮವಾರ) ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ. ಉದ್ಘಾಟನಾ ಸಮಾರಂಭ ಮುಗಿದ ಬಳಿಕ ಸಂಪುಟ ಸಚಿವರು, ಶಾಸಕರು ಮತ್ತು ಲೋಕಸಭೆ ಸಂಸದರೊಂದಿಗೆ ಅಯೋಧ್ಯೆ ಪ್ರವಾಸ ಕೈಗೊಳ್ಳುತ್ತೇನೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಯೋಧ್ಯೆಯಲ್ಲಿ ನಡೆಯುವ ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ಬೆರಳೆಣಿಕೆಯಷ್ಟು ಜನ ಸೇರುವ ಬದಲು ಸಂಪುಟದ ಸಚಿವರು, ಶಾಸಕರು ಮತ್ತು ಸಂಸದರನ್ನು ಕರೆದುಕೊಂಡು ಹೋಗಲು ನಿರ್ಧರಿಸಿದ್ದೇನೆ’ ಎಂದು ಹೇಳಿದ್ದಾರೆ.
‘ರಾಮಮಂದಿರ ನಮ್ಮ ನಂಬಿಕೆ ಮತ್ತು ಹೆಮ್ಮೆಯ ಸಂಗತಿಯಾಗಿದೆ. ನಮ್ಮೊಂದಿಗೆ ಅಧಿಕಾರಿಗಳು ಮತ್ತು ಭಕ್ತರನ್ನು ಸಹ ಅಯೋಧ್ಯೆಗೆ ಕರೆದೊಯ್ಯಲು ಬಯಸಿದ್ದೇನೆ’ ಎಂದಿದ್ದಾರೆ.
ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೂ ಮುನ್ನ ರಾಜ್ಯದಾದ್ಯಂತ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳುವಂತೆ ಹಾಗೂ ದೀಪಗಳಿಂದ ಅಲಂಕರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಫೆಬ್ರುವರಿಯಲ್ಲಿ ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.