ಗುರುಗ್ರಾಮ: ಹರಿಯಾಣದ ಪಲ್ವಾಲ್‌ನ ಪೊಂಡ್ರಿಯಲ್ಲಿ ಆಗಸ್ಟ್ 13ರಂದು ನಡೆದ ‘ಸರ್ವ ಹಿಂದೂ ಸಮಾಜ ಮಹಾಪಂಚಾಯತ್’ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಅಪರಿಚಿತ ವ್ಯಕ್ತಿಗಳ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಿಎಸ್‌ಐ ಸಚಿನ್ ಅವರು ನೀಡದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ್ದ ಕೆಲವು ಒಂದು ಸಮುದಾಯದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153-A (ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವುದು), 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಹಾಗೂ ಇನ್ನಿತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ.
‘ಎಫ್‌ಐಆರ್ ದಾಖಲಾಗಿದ್ದು, ಕಾನೂನಿಯ ಅನ್ವಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈನಲ್ಲಿ ನೂಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆಯ ವೇಳೆ ಹಿಂಸಾಚಾರ ನಡೆದಿತ್ತು. ಇದು ಪಕ್ಕದ ಗುರುಗ್ರಾಮ ಜಿಲ್ಲೆಗೂ ವ್ಯಾಪಿಸಿತ್ತು. ಘಟನೆಯಲ್ಲಿ ಕನಿಷ್ಠ 7 ಮಂದಿ ಸಾವಿಗೀಡಾಗಿ 70ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅರ್ಧಕ್ಕೆ ನಿಂತಿದ್ದ ಮೆರಣಿಗೆಯನ್ನು ಮುಂದುವರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಈ ಮಹಾಪಂಚಾಯತ್ ನಡೆಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.