ಕೋಟಯಂ, ಕೇರಳ: ಕ್ರೈಸ್ತ ಸನ್ಯಾಸಿನಿಮೇಲೆ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಜಲಂಧರ್‌ನ ರೋಮನ್ ಕೆಥೋಲಿಕ್ ಚರ್ಚ್‌ನ ಬಿಷಪ್ ಫ್ರಾಂಕೊ ಮೂಲಕ್ಕಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘2014ರಲ್ಲಿ ಬಿಷಪ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ’ ಎಂದು ಸನ್ಯಾಸಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಕಾನೂನು ಹೋರಾಟ ಮುಂದುವರಿಸುವುದಾಗಿಯೂ ತಿಳಿಸಿದ್ದಾರೆ.
ವಾರದ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಸನ್ಯಾಸಿನಿ ದೂರು ಸಲ್ಲಿಸಿದ್ದರು.
ಸನ್ಯಾಸಿನಿ ವಿರುದ್ಧ ಬಿಷಪ್ ಕೂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ‘ಸನ್ಯಾಸಿನಿ ವಿರುದ್ಧ ನಾನು ಶಿಸ್ತುಕ್ರಮ ಕೈಗೊಂಡಿದ್ದು, ಈ ವೈಷಮ್ಯದಿಂದ ಆಕೆ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಬಿಷಪ್ ದೂರಿನಲ್ಲಿ ತಿಳಿಸಿದ್ದಾರೆ.
‘ಸನ್ಯಾಸಿನಿಯ ಸಂಬಂಧಿಕರು ಜೀವ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಬಿಷಪ್ ಮೊದಲು ದೂರು ಸಲ್ಲಿಸಿದ್ದರು. ಅನಂತರ ಸನ್ಯಾಸಿನಿ ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ’ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಕೇರಳದ ಫ್ರಾಂಕೊಮೂಲಕ್ಕಲ್ ಅವರು 2013ರಿಂದ ಜಲಂಧರ್‌ನಲ್ಲಿ ಬಿಷಪ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.