ಕೋಲ್ಕತ್ತಾ: ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಿದ್ದು, ಭಾರೀ ಮಳೆಯಾಗುತ್ತಿದೆ.
ಕೋಲ್ಕತ್ತಾದಲ್ಲಿ ಹಲವು ಪ್ರದೇಶಗಳಿಗೆ ನೀರು ನುಗ್ಗಿದೆ. ಸುಮಾರು 2.16 ಲಕ್ಷ ಜನರನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಆದರೂ ಪ್ರಾಕೃತಿಕ ವಿಕೋಪದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಚಂಡಮಾರುತ ಅಪ್ಪಳಿಸುವವರೆಗೂ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದ ಮಮತಾ, ಬಳಿಕ ಪರಿಶೀಲನಾ ಸಭೆ ನಡೆಸಿ, ಚಂಡಮಾರುತದಿಂದ ಹಾನಿಯಾದ ಪ್ರದೇಶಗಳಿಗೆ ಪರಿಹಾರ ಸಾಮಗ್ರಿಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೇಬಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ಸಾವಿಗೆ ನೈಸರ್ಗಿಕ ವಿಕೋಪ ಕಾರಣ ಎಂಬುದು ದೃಢಪಟ್ಟಿದೆ. ಮೃತ ಕುಟುಂಬಕ್ಕೆ ಅಗತ್ಯವಿದ್ದರೆ ಸರ್ಕಾರ ನೆರವು ನೀಡಲಿದೆ ಎಂದು ಮಮತಾ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.