ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಮುಂದೂಡುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಒಂದು ರಾಷ್ಟ್ರ ಒಂದು ಚುನಾವಣೆ’ ವಿಚಾರವನ್ನು ವ್ಯಾಪಕವಾಗಿ ಪ್ರಚಾರ ಮಾಡುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ಖ್ಯಾತ ವಕೀಲ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಭೂಷಣ್, ‘ಭಾರತದಂತಹ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ದೇಶದಲ್ಲಿ ‘ಒಂದು ರಾಷ್ಟ್ರ ಒಂದು ಚುನಾವಣೆ’ ಕಾರ್ಯಗತಗೊಳಿಸಲು ಸಾಧ್ಯವಿಲ್ಲ. ಏಕೆಂದರೆ ನಮ್ಮ ವ್ಯವಸ್ಥೆಯಲ್ಲಿ ಮಧ್ಯದಲ್ಲಿಯೇ ಬಹುಮತ ಕಳೆದುಕೊಂಡು ಸರ್ಕಾರವೊಂದು ಅಧಿಕಾರದಿಂದ ಕೆಳಗಿಳಿಯಬಹುದು ಮತ್ತು ಹೊಸ ಸರ್ಕಾರ ರಚನೆಯಾಗಬಹುದು. ಆದರೆ, ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಯಾದರೆ ಇಂತಹ ಪರಿಸ್ಥಿತಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆ. ಇದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ’ ಎಂದು ಹೇಳಿದರು.
‘ಒಂದು ರಾಷ್ಟ್ರ ಒಂದು ಚುನಾವಣೆ ಎಂದರೆ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ರಾಷ್ಟ್ರಪತಿ ಆಳ್ವಿಕೆಗೆ ಬದಲಾಗುತ್ತಿದ್ದೇವೆ ಎಂದರ್ಥ. ಇದು ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ. ಇದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ತಿಳಿದಿದೆ. ರಾಷ್ಟ್ರಪತಿ ಆಡಳಿತ ವ್ಯವಸ್ಥೆಗೆ ಬದಲಾಯಿಸಲು ಸಂವಿಧಾನದಲ್ಲಿ ಹಲವಾರು ತಿದ್ದುಪಡಿಗಳ ಅಗತ್ಯವಿದೆ ಎಂಬ ಮಾಹಿತಿ ಕೂಡ ಕೇಂದ್ರ ಸರ್ಕಾರಕ್ಕಿದೆ’ ಎಂದು ಹೇಳಿದರು.
‘ಈಗಿನ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಬಹುಮತವಿಲ್ಲ. ಆದರೂ ಐದು ರಾಜ್ಯಗಳ ಚುನಾವಣೆಯನ್ನು ಮುಂದೂಡುವ ಉದ್ದೇಶದಿಂದ ‘ಒಂದು ರಾಷ್ಟ್ರ ಒಂದು ಚುನಾವಣೆ‘ ವಿಷಯವನ್ನು ಮುಂದಕ್ಕೆ ತಂದಿದೆ’ ಎಂದು ಹೇಳಿದರು.
‘ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ ಕಾಡುತ್ತಿದೆ. ಹಾಗಾಗಿ ‘ಒಂದು ರಾಷ್ಟ್ರ ಒಂದು ಚುನಾವಣೆ‘ ಹೆಸರಿನಲ್ಲಿ 2024ರ ಲೋಕಸಭಾ ಚುನಾವಣೆಯವರೆಗೂ ವಿಧಾನಸಭೆ ಚುನಾವಣೆಯನ್ನು ಮುಂದೂಡಲು ಹೊರಟಿದೆ. ಅಲ್ಲಿಯವರೆಗೆ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬಹುದು’ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.