ನವದೆಹಲಿ: ‘ಆಗ್ನೇಯ ದೆಹಲಿಯಕಾಳಿಂದಿ ಕುಂಜ್ ಮೆಟ್ರೊ ನಿಲ್ದಾಣದ ಬಳಿಯಿರುವ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಲ್ಲಿ 56 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ’ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.
‘ಈ ಬಗ್ಗೆ ಶನಿವಾರ ರಾತ್ರಿ 11.55ಕ್ಕೆ ನಮಗೆ ಮಾಹಿತಿ ಸಿಕ್ಕಿತು. ತಕ್ಷಣವೇ ಐದು ಅಗ್ನಿಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಯಿತು. ಭಾನುವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ’ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
‘ರೋಹಿಂಗ್ಯಾ ನಿರಾಶ್ರಿತರ 270 ಕುಟುಂಬಗಳ ಪೈಕಿ 56 ಕುಟುಂಬಗಳ ಗುಡಿಸಲುಗಳು ಸುಟ್ಟು ಹೋಗಿವೆ. ಬೆಂಕಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನೂ ಗೊತ್ತಾಗಿಲ್ಲ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ’ ಎಂದು ಡಿಸಿಪಿ (ಆಗ್ನೇಯ) ಪಿ.ಆರ್ ಮೀನಾ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.