ಮುಂಬೈ:ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರ ವಿಚಾರಣೆಯನ್ನು ಮುಂಬೈ ನಗರ ಅಪರಾಧ ವಿಭಾಗವು ಗುರುವಾರ ನಡೆಸಿದೆ.
ಮಹಾರಾಷ್ಟ್ರದಲ್ಲಿ ದಾಖಲಾಗಿರುವ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಮ್ ಬೀರ್ ಸಿಂಗ್ ಅವರನ್ನು ಸತತ ಆರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿದೆ.
ಪರಮ್ ಬೀರ್ ಸಿಂಗ್ ಅವರನ್ನು ಘೋಷಿತ ಅಪರಾಧಿ ಎಂದು ಮುಂಬೈ ಕೋರ್ಟ್ ಕರೆದಿದೆ.
ಪೊಲೀಸ್ ಆಯುಕ್ತ ಹುದ್ದೆಯಿಂದ ವರ್ಗಾವಣೆಯಾದ ಮತ್ತು ಆಗಿನ ಗೃಹ ಸಚಿವ ಅನಿಲ್ ದೇಶ್‌ಮುಖ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ನಂತರ ಮೇ ತಿಂಗಳಿಂದ ಅವರು ಕೆಲಸಕ್ಕೆ ಹಾಜರಾಗಿಲ್ಲ.
ಬಂಧನದಿಂದ ರಕ್ಷಣೆ ಕೋರಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆ ಬಳಿ ನಿಲ್ಲಿಸಿದ್ದ ಎಸ್‌ಯುವಿಯಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾದ ಬಳಿಕ ಮುಂಬೈ ಪೊಲೀಸ್ ಆಧಿಕಾರಿ ಸಚಿನ್ ವಾಜೆ ಅವರನ್ನು ಬಂಧಿಸಲಾಗಿತ್ತು. ಅನಂತರ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.
ಮಹಾರಾಷ್ಟ್ರದ ಆಗಿನ ಗೃಹಸಚಿವ ಅನಿಲ್ ದೇಶ್‌ಮುಖ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಸಿಂಗ್ ಅವರು ಕ್ರಿಮಿನಲ್ ಪ್ರಕರಣಗಳಲ್ಲಿ ತಮ್ಮನ್ನು ಸಿಲುಕಿಸಲಾಗಿದೆ ಎಂದು ದೂರಿದ್ದರು.
ಬಂಧನದಿಂದ ರಕ್ಷಣೆ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಲ್ಲದೆ, ಇಡೀ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.