ನವದೆಹಲಿ: ವಿಮಾನ ಟೇಕಾಫ್ ವಿಳಂಬದ ಬಗ್ಗೆ ಮಾಹಿತಿ ನೀಡುತ್ತಿದ್ದ ಇಂಡಿಗೋ ವಿಮಾನದ ಪೈಲಟ್ ಮೇಲೆ ಹಲ್ಲೆ ನಡೆಸಿದ ಘಟನೆ ಈಚೆಗೆ ನಡೆದಿತ್ತು. ಪ್ರಕರಣ ಸಂಬಂಧ ಆರೋಪಿತ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ದೂರು ಬಂದಿದ್ದು, ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಡಿಸಿಪಿ ತಿಳಿಸಿದ್ದರು.
ಪೈಲಟ್ ಮೇಲೆ ಹಲ್ಲೆ ಮಾಡಿದ ಬಳಿಕ ಇತರ ವಿಮಾನ ಸಿಬ್ಬಂದಿ ಹಾಗೂ ಪ್ರಯಾಣಿಕರು ಕಿರುಚುವ ಶಬ್ದ ವಿಡಿಯೊದಲ್ಲಿ ದಾಖಲಾಗಿತ್ತು.
ಪ್ರಯಾಣಿಕನ ವರ್ತನೆ ಸ್ವೀಕಾರಾರ್ಹವಲ್ಲ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದರು.
ದೆಹಲಿ ಮತ್ತು ಗೋವಾ ನಡುವಿನ ವಿಮಾನ ಸಂಖ್ಯೆ 6E 2175ರಲ್ಲಿ ಓರ್ವ ಪ್ರಯಾಣಿಕ ಪೈಲಟ್ ಮತ್ತು ಇತರ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಅನುಚಿತವಾಗಿ ವರ್ತಿಸಿದ ಬಗ್ಗೆ ಇಂಡಿಗೋ ಸಿಬ್ಬಂದಿ ದೂರು ನೀಡಿದ್ದಾರೆ. ಪ್ರಯಾಣಿಕ ಪೈಲಟ್‌ಗೆ ಹೊಡೆದು ವಿಮಾನದೊಳಗೆ ಅವಾಂತರ ಸೃಷ್ಟಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹಲವು ಗಂಟೆಗಳ ಕಾಲ ವಿಮಾನ ವಿಳಂಬವಾಗಿದ್ದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದ ಎಂದೂ ಪೊಲೀಸರು ತಿಳಿಸಿದ್ದಾರೆ.
ಪ್ರಯಾಣಿಕನ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ ಹಾಗೂ ವಿಮಾನಯಾನ ನಿಯಮಗಳ ಸೆಕ್ಷನ್ 22ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಯಾಣಿಕನ ಅಶಿಸ್ತಿನ ವರ್ತನೆ ಸಹಿಸಲ್ಲ. ಶಿಷ್ಟಾಚಾರದ ಪ್ರಕಾರ ಮುಂದಿನ ಕ್ರಮಕ್ಕಾಗಿ ಪ್ರಕರಣವನ್ನು ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದೆ. ನಿಯಂತ್ರಕ ಮಾರ್ಗಸೂಚಿಗಳಲ್ಲಿ ಸೂಚಿಸಿದಂತೆ ಪ್ರಯಾಣಿಕನ ವಿಮಾನ ಪ್ರಯಾಣದ ಮೇಲೆ ನಿಷೇಧ (no-fly list) ಹೇರಲಾಗುತ್ತದೆ ಎಂದು ಇಂಡಿಗೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.